ಬೆಂಗಳೂರು: ಸುಪ್ರೀಂ ಕೋರ್ಟ್‌ನಿಂದ ಬಿಬಿಎಂಪಿ, ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಗೆ ಗ್ರೀನ್ ಸಿಗ್ನಲ್ ನೀಡಲಾಗಿತ್ತು. ಈ ಸಂಬಂಧ ಹೈಕೋರ್ಟ್ ಕೂಡ ಮೀಸಲಾತಿ, ಕ್ಷೇತ್ರಗಳ ಮರುವಿಂಗಡಣೆಯನ್ನು 3 ತಿಂಗಳ ಒಳಗಾಗಿ ಮುಕ್ತಾಯಗೊಳಿಸಿ, ಪೂರ್ಣಗೊಂಡ ಒಂದು ವಾರದಲ್ಲಿ ಚುನಾವಣೆ ಪ್ರಕ್ರಿಯೆ ಆರಂಭಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿದೆ.
ಇಂದು ರಾಜ್ಯ ಜಿಲ್ಲಾ, ತಾಲೂಕು ಪಂಚಾಯ್ತಿಗಳ ಗಡಿ ನಿರ್ಣಯ ಮತ್ತು ಮೀಸಲಾತಿ ಕುರಿತು ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಆವಸ್ಥಿ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರನ್ನೊಳಗೊಂಡ ನ್ಯಾಯಪೀಠ ವಿಚಾರಣೆ ನಡೆಸಿದೆ.
ಸರ್ಕಾರ ಹಾಗೂ ಚುನಾವಣಾ ಆಯೋಗದ ವಾದ, ಪ್ರತಿವಾದವನ್ನು ಆಲಿಸಿದ ನ್ಯಾಯಪೀಠವು, 12 ವಾರಗಳ ಒಳಗಾಗಿ ಕ್ಷೇತ್ರ ಮರುವಿಂಗಡಣೆ ಹಾಗೂ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸಿ ಅಧಿಸೂಚನೆ ಹೊರಡಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ. ಅಲ್ಲದೇ ಈ ಬಳಿಕ ಒಂದು ವಾರದಲ್ಲಿ ರಾಜ್ಯ ಚುನಾವಣಾ ಆಯೋಗವು ಚುನಾವಣಾ ಪ್ರಕ್ರಿಯೆ ಮುಗಿಸುವಂತೆ ತಿಳಿಸಿದೆ. ಜೊತೆಗೆ ಯಾವುದೇ ಕಾರಣ ನೀಡಿ, ಮತ್ತೆ ಸಮಯ ವಿಸ್ತರಣೆಗೆ ಕೋರುವಂತಿಲ್ಲ ಎಂಬುದಾಗಿ ಖಡಕ್ ಸೂಚನೆ ನೀಡಿದೆ.
PublicNext
24/05/2022 08:57 pm