ವಿಜಯಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಜಯಪುರದಲ್ಲಿ ಗುಟುರು ಹಾಕುವ ಮೂಲಕ ಮುಂದಿನ ಚುನಾವಣೆಗಳನ್ನು ನನ್ನ ಸಾರಥ್ಯದಲ್ಲೇ ನಡೆಸಬೇಕು, ಯಾವುದೇ ಕಾರಣಕ್ಕೂ ನನ್ನನ್ನು ಕಡೆಗಣಿಸಬಾರದು ಎಂಬ ಸಂದೇಶವನ್ನು ಪಕ್ಷದ ವರಿಷ್ಠರಿಗೆ ಪರೋಕ್ಷವಾಗಿ ರವಾನಿಸಿದ್ದಾರೆ.
ವಿಧಾನ ಪರಿಷತ್ ವಾಯುವ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಗರದ ಕಿತ್ತೂರು ರಾಣಿ ಚೆನ್ನಮ್ಮ ಸಮುದಾಯ ಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಪಕ್ಷದ ಮುಖಂಡರ ಮತ್ತು ಮತದಾರರ ಸಭೆಯಲ್ಲಿ ಮಾತನಾಡಿದ ಅವರು, 'ನನಗೆ ವಯಸ್ಸಾಗಿದೆ ಎಂಬ ಚಿಂತೆ ಪಕ್ಷದ ಕಾರ್ಯಕರ್ತರಿಗೆ, ಮುಖಂಡರಿಗೆ ಬೇಡ. ಇನ್ನೂ 10 ವರ್ಷ ರಾಜ್ಯದಾದ್ಯಂತ ಪ್ರವಾಸ ಮಾಡಿ, ಪಕ್ಷ ಕಟ್ಟಿ ಅಧಿಕಾರಕ್ಕೆ ತರುತ್ತೇನೆ' ಎಂದು ಸ್ಪಷ್ಟ ಸಂದೇಶ ನೀಡಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ 140 ಶಾಸಕರನ್ನು ಆರಿಸಿಕೊಂಡು ಬರಲು ಈಗಿನಿಂದಲೇ ಪಕ್ಷದ ಕಾರ್ಯಕರ್ತರು, ಮುಖಂಡರು ಶ್ರಮಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ಮತ್ತು ಯುವ ಮೋರ್ಚಾವನ್ನು ಇನ್ನಷ್ಟು ಸಂಘಟಿಸುವ ಅಗತ್ಯವಿದೆ. ಈ ಮೂಲಕ ಮುಂಬರುವ ಚುನಾವಣೆಯಲ್ಲಿ ಗೆಲುವು ಸಾಧಿಸಲು ಅನುಕೂಲವಾಗಲಿದೆ ಎಂದು ಹೇಳಿದರು.
ಬಿಜೆಪಿಯಲ್ಲಿರುವಷ್ಟು ಬಲಿಷ್ಠ ಕಾರ್ಯಕರ್ತರ ಪಡೆ ಬೇರೆ ಯಾವ ಪಕ್ಷದಲ್ಲೂ ಇಲ್ಲ. ಕಾಂಗ್ರೆಸ್, ಜೆಡಿಎಸ್ ಮುಖಂಡರ ಟೀಕೆಗಳಿಗೆ ಜೂನ್ 13ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರು, ಮತದಾರರು ಸೂಕ್ತ ಉತ್ತರ ನೀಡಬೇಕಿದೆ ಎಂದರು.
PublicNext
08/06/2022 07:49 am