ಬೆಂಗಳೂರು: ಭಾರತೀಯ ಯೋಧರನ್ನು ಗುತ್ತಿಗೆ ಕಾರ್ಮಿಕರನ್ನಾಗಿ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಇದೇ ತಿಂಗಳು 27ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆವರೆಗೂ ರಾಜ್ಯಾದ್ಯಂತ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಆಯಾ ಶಾಸಕರು, ಪರಾಜಿತ ಅಭ್ಯರ್ಥಿಗಳು, ಸಂಸದರು, ಇತರೆ ನಾಯಕರ ನೇತೃತ್ವದಲ್ಲಿ ಶಾಂತಿಯುತ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ ಅವರು ಅಧಿಕಾರಕ್ಕೆ ಬರುವ ಮುನ್ನ ಬಣ್ಣ ಬಣ್ಣದ ಮಾತುಗಳ ಮೂಲಕ ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುತ್ತೇವೆ ಎಂದಿದ್ದರು. ಕಳೆದ 8 ವರ್ಷಗಳಲ್ಲಿ 16 ಕೋಟಿ ಉದ್ಯೋಗ ನೀಡಬೇಕಿತ್ತು. ಆದರೆ ನೀಡಲಿಲ್ಲ. ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲೇ 60 ಲಕ್ಷ ಹುದ್ದೆಗಳು ಖಾಲಿ ಇದ್ದರೂ ಅವುಗಳನ್ನು ಭರ್ತಿ ಮಾಡುತ್ತಿಲ್ಲ. ಈ ವಿಚಾರವಾಗಿ ವ್ಯಾಪಕ ಟೀಕೆ ವ್ಯಕ್ತವಾಗಿರುವ ಹಿನ್ನೆಲೆ ಈಗ 10 ಲಕ್ಷ ಉದ್ಯೋಗ ಭರ್ತಿ ಮಾಡುವುದಾಗಿ ಹೇಳಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಈ ದೇಶವನ್ನು ಹಂತ ಹಂತವಾಗಿ ನಾಶ ಮಾಡಲು ಹೊರಟಿದೆ. ನೋಟು ರದ್ದತಿ, ಅವೈಜ್ಞಾನಿಕ ಜಿಎಸ್‌ಟಿ, ತರಾತುರಿ ಲಾಕ್ ಡೌನ್ ಮೂಲಕ ದೇಶದ ಆರ್ಥಿಕತೆ ಕ್ಷೀಣಿಸಿದೆ. ಕರಾಳ ಕೃಷಿ ಕಾಯ್ದೆ ತಂದು ರೈತರ ಭವಿಷ್ಯ ನಾಶ ಮಾಡಲು ಮುಂದಾದರು. ನಂತರ ವ್ಯಾಪಕ ವಿರೋಧದಿಂದ ಹಿಂಪಡೆದರು. ಇನ್ನು ದೇಶದಲ್ಲಿ ಕೋಮುದ್ವೇಷ ಹಚ್ಚಿ ದೇಶದ ಐಕ್ಯತೆ ನಾಶ ಮಾಡಿದರೆ, ಅಧಿಕಾರ, ಸಂವಿಧಾನ ಸಂಸ್ಥೆಗಳ ದುರ್ಬಳಕೆಯಿಂದ ಪ್ರಜಾಪ್ರಭುತ್ವ ವ್ಯವಸ್ಥೆ ನಾಶ ಮಾಡಿದ್ದಾರೆ. ಈಗ ಅಗ್ನಿಪಥ್ ಯೋಜನೆ ಹೆಸರಲ್ಲಿ ದೇಶದ ಭದ್ರತೆ ನಾಶ ಮಾಡಲು ಹೊರಟಿದ್ದಾರೆ ಎಂದು ರಾಮಲಿಂಗಾರೆಡ್ಡಿ ಕೇಂದ್ರ ಸರಕಾರದ ನಡೆಯನ್ನು ಖಂಡಿಸಿದ್ದಾರೆ.
PublicNext
24/06/2022 08:03 pm