ಬೆಂಗಳೂರು: 'ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಉದ್ಯೋಗ ಪಡೆಯಬೇಕು ಎಂದರೆ ಯುವತಿಯರು ಮಂಚ ಹತ್ತಬೇಕಾಗಿದೆ' ಎಂದಿದ್ದ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ. ಕಾಂಗ್ರೆಸ್ ಮಹಿಳಾ ವಿರೋಧಿ ಎಂದೂ ದೂರಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ನಾಯಕರ 'ತಮ್ಮ ಮನೆಯ ಹೆಂಚು ತೂತು' ಎಂಬುದೇ ಗೊತ್ತಿಲ್ಲ. ಇವರು ಆರೋಪ ಮಾಡಿದ ಬೆನ್ನಲ್ಲೇ, ಜಯಮಾಲಾ ಅವರ ಲಂಚದ ಹಗರಣ ಬಯಲಾಗಿದೆ. ಹಾಗಾದರೆ ಲಂಚದ ಸರ್ಕಾರ ಯಾರದ್ದು? ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಜೂನಿಯರ್ ಖರ್ಗೆ ಅವರೇ, ಸಭ್ಯಸ್ಥರ ಮುಖವಾಡ ಹಾಕಿ ಸಮಾಜದ ಕಣ್ಣಿಗೆ ಗಣ್ಯರೆಂದು ಬಿಂಬಿಸಿಕೊಂಡ ಕಾಂಗ್ರೆಸ್ ಗೋಮುಖ ವ್ಯಾಘ್ರಗಳ ಪಟ್ಟಿ ನೀಡಿದರೆ ಸಮರ್ಥನೆ ಮಾಡಿಕೊಳ್ಳುವುದಕ್ಕೂ ನಿಮಗೆ ಕಷ್ಟವಾಗಬಹುದು ಎಂದಿದೆ. ಸಾವಿರಾರು ಮಹಿಳೆಯರು, ಪ್ರತಿಭಾವಂತರು, ವಿದ್ಯಾವಂತರು ಕಷ್ಟಪಟ್ಟು ಅನೇಕ ಪರೀಕ್ಷೆಗಳನ್ನು ಉತ್ತೀರ್ಣರಾಗಿ ಕೆಲಸ ಗಿಟ್ಟಿಸಿಕೊಳ್ಳುತ್ತಾರೆ.
ಪ್ರಿಯಾಂಕ ಖರ್ಗೆ ಅವರೇ, ನಿಮ್ಮ ಈ ಮಾತುಗಳು ಅಷ್ಟು ಜನ ಮಹಿಳೆಯರಿಗೆ ಅವಮಾನ ಮಾಡಿದಂತಲ್ಲವೇ? ಕೂಡಲೇ ಕ್ಷಮೆಯಾಚಿಸಿ ಎಂದು ಒತ್ತಾಯಿಸಿದೆ.
ಪ್ರಿಯಾಂಕ್ ಖರ್ಗೆ ಅವರೇ, ಸಹಾಯ ಮಾಡುವುದಾಗಿ ನಂಬಿಸಿ ಅಸಹಾಯಕ ಹೆಣ್ಣೊಬ್ಬಳ ಮೇಲೆ ಮೇಟಿ ಲೈಂಗಿಕ ದೌರ್ಜನ್ಯ ಎಸಗಿದ್ದು ನಿಮ್ಮ ಕಾಲದಲ್ಲೇ ಅಲ್ಲವೇ? ಯುಪಿಎ ಸರ್ಕಾರದಲ್ಲಿ ಪ್ರಭಾವಿಗಳಾಗಿದ್ದ ಕಾಂಗ್ರೆಸ್ ನಾಯಕರು ಮಹಿಳೆಯರ ಮೇಲೆ ನಡೆಸಿದ 'ದಿಗ್ವಿಜಯ' 'ಅಭಿಷೇಕ'ಗಳ ಸಿಡಿ ನಿಮ್ಮ ಮಂಚದ ಸರ್ಕಾರದ ಫಲವಲ್ಲವೇ? ಎಂದು ಪ್ರಶ್ನಿಸಿದೆ.
ಕಲಬುರಗಿಯ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ್ದ ಪ್ರಿಯಾಂಕ್ ಖರ್ಗೆ ಅವರು, 'ಸರ್ಕಾರ ಹುದ್ದೆಗಳನ್ನು ಮಾರಾಟ ಮಾಡಲು ನಿಂತಿದೆ. ಯುವತಿಯರಿಗೆ ಉದ್ಯೋಗ ಬೇಕಾದರೆ ಮಂಚ ಹತ್ತಬೇಕು. ಯುವಕರಿಗೆ ಉದ್ಯೋಗ ಬೇಕಾದರೆ ಲಂಚ ಕೊಡಬೇಕು ಎನ್ನುವಂತಾಗಿದ್ದು, ಇದೊಂದು ಲಂಚ-ಮಂಚದ ಸರ್ಕಾರ. ಯುವತಿಯ ಕೆಲಸ ಮಾಡಿಸಿಕೊಡಲು ಮಂಚ ಹತ್ತಲು ಸಚಿವರೊಬ್ಬರು ಹೇಳಿದ್ದರು. ಹಗರಣ ಬೆಳಕಿಗೆ ಬಂದ ಬಳಿಕ ಅವರು ರಾಜೀನಾಮೆ ನೀಡಿದ್ದೇ ನನ್ನ ಮಾತಿಗೆ ಸಾಕ್ಷಿಯಾಗಿದೆ' ಎಂದರು.
PublicNext
13/08/2022 05:55 pm