ದಾವಣಗೆರೆ: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ನಷ್ಟವುಂಟಾಗಿದೆ. ಈಗಾಗಲೇ ಪ್ರತಿ ತಾಲೂಕಿಗೆ 20 ಕೋಟಿ ರೂಪಾಯಿ ಅನುದಾನವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬಿಡುಗಡೆ ಮಾಡಿದ್ದಾರೆ. ತುರ್ತು ಪರಿಸ್ಥಿತಿ ಇರುವೆಡೆಗಳಲ್ಲಿ ಬಳಕೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ತಿಳಿಸಿದರು.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇಂದು ಬೆಳಿಗ್ಗೆ ಒಂದೂವರೆ ಗಂಟೆಗಳ ಕಾಲ ಅಧಿಕಾರಿಗಳ ಜೊತೆ ಜಿಲ್ಲೆಯಲ್ಲಿ ಆಗಿರುವ ಹಾನಿ ಕುರಿತಂತೆ ಸಮಗ್ರ ಮಾಹಿತಿ ಪಡೆದಿದ್ದೇನೆ. ಜಿಲ್ಲೆಯಲ್ಲಿ ಒಟ್ಟು 13,608 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿದೆ. 856 ಹೆಕ್ಟೇರ್ ಪ್ರದೇಶದಲ್ಲಿನ ತೋಟಗಾರಿಕೆ ಬೆಳೆ ನಷ್ಟ ಆಗಿದೆ. ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸರ್ಕಾರಕ್ಕೆ ಆದಷ್ಟು ಬೇಗ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಬೆಳೆ ಹಾನಿಗೊಳಗಾದವರಿಗೆ ಪರಿಹಾರ ನೀಡುವ ಕೆಲಸ ನಡೆಯುತ್ತಿದೆ. ಮನೆ ಹಾನಿಗೀಡಾದವರಿಗೆ ಪರಿಹಾರವನ್ನೂ ನೀಡಲಾಗುತ್ತಿದೆ. ಕೆಲವು ಬೆರಳೆಣಿಕೆಯಷ್ಟು ಬಾಕಿ ಇದ್ದು, ಆದಷ್ಟು ಬೇಗ ಅವರಿಗೂ ಪರಿಹಾರ ನೀಡಲಾಗುವುದು ಎಂದರು.
PublicNext
03/09/2022 05:46 pm