ಕುಂದಾಪುರ: ಹಾಸ್ಟೆಲ್‌ನಲ್ಲಿದ್ದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯನ್ನಾಗಿಸಿ ವಂಚಿಸಿದ ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿ ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶ ಅಬ್ದುಲ್ ರಹೀಂ ಹುಸೇನ್ ಶೇಖ್ ಆದೇಶಿಸಿದ್ದಾರೆ.
ಕೆರಾಡಿ ನಿವಾಸಿ ಗಣೇಶ್ ಶೆಟ್ಟಿ(37) ಅಪರಾಧಿ. ಅತ್ಯಾಚಾರ ಪ್ರಕರಣಕ್ಕೆ 10 ವರ್ಷ ಕಠಿಣ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ಹಾಗೂ ವಂಚನೆಗೆ 1 ವರ್ಷ ಜೈಲು, 5 ಸಾವಿರ ರೂ. ದಂಡ ವಿಧಿಸಿದೆ. ಸಂತಸ್ತೆಗೆ ಕಾನೂನು ಸೇವಾ ಪ್ರಾಧಿಕಾರದಿಂದ ಪರಿಹಾರ ಒದಗಿಸಲು ಆದೇಶಿಸಿದೆ.
2014ರಲ್ಲಿ ಯುವತಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವೇಳೆ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದು, ಸಮೀಪದ ಗಣೇಶ್ ಶೆಟ್ಟಿಯ ಮನೆಗೆ ಗೆಳೆತಿಯರೊಂದಿಗೆ ಟಿವಿ ನೋಡಲು ಬರುತ್ತಿದ್ದಾಗ ಇಬ್ಬರ ನಡುವೆ ಪರಿಚಯವಾಗಿತ್ತು. ಈ ಸಂದರ್ಭ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ. ಬಳಿಕ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದು, ಲೈಂಗಿಕ ದೌರ್ಜನ್ಯದ ಬಗ್ಗೆ ಕುಂದಾಪುರ ಮಹಿಳಾ ಠಾಣೆಗೆ ದೂರು ನೀಡಿದ್ದಳು.
ಅದರಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಕಂಡ್ಲೂರು ಗ್ರಾಮಾಂತರ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಡಿಎನ್‌ಎ ವರದಿಯಲ್ಲೂ ಗಣೇಶ್ ಶೆಟ್ಟಿಯೇ ಮಗುವಿನ ತಂದೆಯೆಂದು ದೃಢವಾಗಿತ್ತು. ಪ್ರಾಸಿಕ್ಯೂಶನ್ ಪರ ಜಿಲ್ಲಾ ಸರ್ಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ವಾದಿಸಿದ್ದರು.
Kshetra Samachara
09/07/2022 12:50 pm