ಉಡುಪಿ: ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ, ಗಣೇಶ ಮೂರ್ತಿಯ ಪ್ರತಿಷ್ಠಾಪನೆ, ವಿಸರ್ಜನೆ ಕಾರ್ಯಕ್ರಮಗಳಿಗೆ ಅಗತ್ಯ ಅನುಮತಿಗಳನ್ನು ನೀಡುವಾಗ ಕಂದಾಯ, ನಗರ ಸ್ಥಳೀಯಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಗಳ ನಡುವೆ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೇ, ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ.ಇಂದು ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಗೌರಿ, ಗಣೇಶಚತುರ್ಥಿ ಸಂದರ್ಭದಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಗಣೇಶ ಪ್ರತಿಷ್ಠಾಪನೆ ಸಂದರ್ಭದಲ್ಲಿ ಬ್ಯಾನರ್ ಮತ್ತು ಪ್ಲೆಕ್ಸ್‌ಗಳನ್ನು ಅಳವಡಿಸುವ ಮುನ್ನ ಸಂಬಂಧಪಟ್ಟ ಆಯೋಜಕರಿಗೆ ಈ ಬಗ್ಗೆ ಅನುಮತಿ ಪಡೆಯುವಂತೆ ತಿಳಿಸಿ. ಅವುಗಳಲ್ಲಿ ಯಾವುದೇ ಆಕ್ಷೇಪಾರ್ಹ ವಾಕ್ಯಗಳಿಲ್ಲದಿರುವ ಬಗ್ಗೆ ಪರಿಶೀಲನೆ ನಡೆಸಿ. ಬ್ಯಾನರ್, ಪ್ಲೆಕ್ಸ್‌ಗಳಲ್ಲಿ ಲೈಸೆನ್ಸ್ ನೀಡಿದ ಸಂಖ್ಯೆ ಮತ್ತು ಅಂತಿಮ ದಿನಾಂಕವನ್ನು ಮುದ್ರಿಸುವಂತೆ ಸೂಚಿಸಿ, ಅನುಮತಿ ನೀಡಿ. ಏಕಗವಾಕ್ಷಿ ಪದ್ಧತಿ ಮೂಲಕ ಆದಷ್ಟು ಶೀಘ್ರದಲ್ಲಿ ಎಲ್ಲಾ ಅನುಮತಿಗಳನ್ನು ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಗಣೇಶ ಮೂರ್ತಿಯ ವಿಸರ್ಜನೆ ಸಂದರ್ಭದಲ್ಲಿ ಅಗತ್ಯವಿರುವ ಕಡೆಗಳಲ್ಲಿ ಸೂಕ್ತ ಪೊಲೀಸ್ ರಕ್ಷಣೆ ನೀಡುವಂತೆ ಪೊಲೀಸ್ ಇಲಾಖೆಗೆ ತಿಳಿಸಿದ ಜಿಲ್ಲಾಧಿಕಾರಿಗಳು, ವಿಸರ್ಜನಾ ಸ್ಥಳದಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಸೂಕ್ತ ಬೆಳಕಿನ ವ್ಯವಸ್ಥೆ ಸೇರಿದಂತೆ ಇನ್ನಿತರ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
Kshetra Samachara
29/08/2022 07:56 pm