ಉಪ್ಪಿನಂಗಡಿ: ದ.ಕ. ಜಿಲ್ಲೆ ಉಪ್ಪಿನಂಗಡಿಯ ಹಳೆಗೇಟ್‌ನ ಸುಬ್ರಹ್ಮಣ್ಯ ಕ್ರಾಸ್ ಬಳಿ ಇತ್ತೀಚೆಗೆ ನಡೆದಿದ್ದ ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಪಿಎಫ್ಐನ ಮೂವರು ಮುಖಂಡರನ್ನು ತನಿಖೆಗೆಂದು ಕರೆದು ಬಳಿಕ ಬಂಧಿಸಿದ್ದರೆಂದು ಆರೋಪಿಸಿ ಸಂಘಟನೆ ಕಾರ್ಯಕರ್ತರು ಮಂಗಳವಾರ ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು. ಪರಿಣಾಮ 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ನಿನ್ನೆ ಬೆಳಗ್ಗೆಯೇ ಉಪ್ಪಿನಂಗಡಿ ಠಾಣೆ ಮುಂದೆ ಜನ ಜಮಾಯಿಸಿದ್ದು, ಸಂಜೆವರೆಗೂ ಪ್ರತಿಭಟನೆ ಮುಂದುವರಿದಿದೆ. ಬಳಿಕ ಡಿವೈಎಸ್ಪಿ ಡಾ.ಗಾನಾ ಕುಮಾರ್ ಸ್ಥಳಕ್ಕಾಗಮಿಸಿ ಸಂಘಟನೆಯ ಕೆಲ ಮುಖಂಡರನ್ನು ಮಾತುಕತೆಗೆ ಆಹ್ವಾನಿಸಿ, ವಶಕ್ಕೆ ಪಡೆದವರನ್ನು ಬಿಡುಗಡೆಗೊಳಿಸುವ ಭರವಸೆ ನೀಡಿದರು. ಅದರಂತೆ ಪ್ರತಿಟನಾಕಾರರು ಸ್ಥಳದಿಂದ ನಿರ್ಗಮಿಸಿದ್ದರು. ಆದರೆ, ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದ ಮೂವರ ಪೈಕಿ ಓರ್ವನನ್ನು ಮಾತ್ರ ಬಿಡುಗಡೆಗೊಳಿಸಿದ್ದರು. ಇದು ತಿಳಿಯುತ್ತಿದ್ದಂತೆ ಮತ್ತೆ ಠಾಣೆಯೆದುರು ಜನ ಜಮಾಯಿಸಿದ್ದಾರೆ. ಉಳಿದಿಬ್ಬರನ್ನೂ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಮತ್ತೆ ಪ್ರತಿಭಟನೆ ನಡೆಸಿದ್ದಾರೆ.
ರಾತ್ರಿಯೂ ಪ್ರತಿಭಟನೆ ಮುಂದುವರಿದಿತ್ತು. 9 ಗಂಟೆ ಸುಮಾರಿಗೆ ಪ್ರತಿಭಟನಾಕಾರರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಪರಿಣಾಮ ಮೂವರು ಪೊಲೀಸರ ಸಹಿತ 10ಕ್ಕೂ ಅಧಿಕ ಮಂದಿ ತೀವ್ರ ಗಾಯಗೊಂಡಿದ್ದಾರೆ. ಸಂಜೆ ವೇಳೆ ಸ್ಥಳಕ್ಕಾಗಮಿಸಿದ್ದ ಪುತ್ತೂರು ತಹಶೀಲ್ದಾರ್ ಟಿ.ರಮೇಶ್ ಬಾಬು 144 ಸೆಕ್ಷನ್ ಜಾರಿಗೊಳಿಸಿದ್ದರು. ಆ ಬಳಿಕವೂ ಪ್ರತಿಭಟನೆ ಮುಂದುವರಿಸಿದ್ದರಿಂದ ಪೊಲೀಸರು ಲಾಠಿಚಾರ್ಜ್ ನಡೆಸಿ ಗುಂಪನ್ನು ಚದುರಿಸಿದ್ದಾರೆ. ಸದ್ಯ ಉಪ್ಪಿನಂಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸ್ಥಳದಲ್ಲಿ ರಾಜ್ಯ ಹಾಗೂ ದ.ಕ. ಜಿಲ್ಲಾ ಮೀಸಲು ಪೊಲೀಸ್ ಪಡೆ ತುಕಡಿಗಳನ್ನು ನಿಯೋಜಿಸಲಾಗಿದೆ.
Kshetra Samachara
15/12/2021 12:31 pm