ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದ ಪ್ರಥಮ ದರ್ಜೆ ಸಹಾಯಕನಿಗೆ 4ವರ್ಷ ಜೈಲು, 1ಕೋಟಿ ರೂ. ದಂಡ

ಮಂಗಳೂರು: ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಹೊಂದಿರುವ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಥಮ ದರ್ಜೆ ಸಹಾಯಕನಿಗೆ 4 ವರ್ಷಗಳ ಕಾಲ ಸಾದಾ ಸಜೆ ಹಾಗೂ 1 ಕೋಟಿ ರೂ. ದಂಡ ವಿಧಿಸಿ ಸೋಮವಾರ ತೀರ್ಪು ನೀಡಿ ಆದೇಶಿಸಿದೆ.

ಬಂಟ್ವಾಳ ತಾಲೂಕು ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕನಾಗಿ ವೃತ್ತಿ ನಿರ್ವಹಿಸುತ್ತಿದ್ದ ಉಪ್ಪಿನಂಗಡಿ ನಿವಾಸಿ ಯು.ಓಂಪ್ರಕಾಶ್ ಹೆಗ್ಡೆ ಶಿಕ್ಷೆಗೊಳಗಾದ ಅಪರಾಧಿ.

ಓಂಪ್ರಕಾಶ್ ಹೆಗ್ಡೆ ತನ್ನ ಗಳಿಕೆಗಿಂತ ಅಪಾರ ಪ್ರಮಾಣದ ಆಸ್ತಿ ಹೊಂದಿದ್ದ ಎಂದು 2014 ಜನವರಿ 28ರಂದು ಕರ್ನಾಟಕ ಲೋಕಾಯುಕ್ತ ಮಂಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಮಂಗಳೂರು ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಎಸ್.ವಿಜಯ್ ಪ್ರಸಾದ್ ಈ ಪ್ರಕರಣದ ತನಿಖೆಯನ್ನು ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ಕೈಗೆತ್ತಿಕೊಂಡ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ ಆರೋಪಿಗೆ 4 ವರ್ಷಗಳ ಸಾದಾ ಸಜೆ ಹಾಗೂ 1 ಕೋ.ರೂ. ದಂಡ ವಿಧಿಸಿದ್ದಾರೆ. ದಂಡ ತೆರಲು ವಿಫಲವಾದಲ್ಲಿ ಮತ್ತೆ 1 ವರ್ಷದ ಸಾದಾ ಸಜೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಆರೋಪಿಯು ಪ್ರಸ್ತುತ ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ ಎನ್ನಲಾಗಿದೆ.

ಕರ್ನಾಟಕ ಲೋಕಾಯುಕ್ತ ಮಂಗಳೂರಿನ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪ್ಪಾಡಿ ಸರಕಾರದ ಪರವಾಗಿ ವಾದ ಮಂಡಿಸಿದ್ದಾರೆ.

Edited By : Nagaraj Tulugeri
PublicNext

PublicNext

02/08/2022 08:44 am

Cinque Terre

31.82 K

Cinque Terre

4

ಸಂಬಂಧಿತ ಸುದ್ದಿ