ಸುಳ್ಯ: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿದ್ದ ಮೂವರು ಪ್ರಮುಖ ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪೊಲೀಸ್ ಕಸ್ಟಡಿಯಲ್ಲಿದ್ದ ಪ್ರಕರಣದ ಪ್ರಮುಖ ಆರೋಪಿಗಳಾದ ಶಿಯಾಬುದ್ದೀನ್, ರಿಯಾಜ್ ಅಂಕತಡ್ಕ, ಬಶೀರ್ ಎಂಬವರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನಲೆಯಲ್ಲಿ ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ ಆ.24ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.
ಆ.11 ರಂದು ಬಂಧಿಸಲಾದ ಇವರನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸ್ ಅಧಿಕಾರಿಗಳು ಮನವಿ ಸಲ್ಲಿಸಿದ್ದರು. ಮನವಿ ಪುರಸ್ಕರಿಸಿದ ನ್ಯಾಯಾಲಯವು ಆರೋಪಿಗಳನ್ನು 5 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡಿತ್ತು. ಪೊಲೀಸರು ಆರೋಪಿಗಳನ್ನು ಕಸ್ಟಡಿಗೆ ಪಡೆದು ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ. ಇಂದು ಕಸ್ಟಡಿ ಅವಧಿ ಮುಗಿದ ಹಿನ್ನಲೆ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Kshetra Samachara
16/08/2022 10:10 pm