ಮಂಗಳೂರು: ಬೆಳ್ಳಾರೆಯಲ್ಲಿ ಇತ್ತೀಚೆಗೆ ನಡೆದಿರುವ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ದುಷ್ಕರ್ಮಿಗಳನ್ನು ಪತ್ತೆ ಹಚ್ಚುವಲ್ಲಿ ಶ್ರಮವಹಿಸಿದ 84 ಮಂದಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ತನಿಖಾ ತಂಡಕ್ಕೆ ಇಂದು ದ.ಕ.ಜಿಲ್ಲಾ ಪೊಲೀಸ್ ಭವನದಲ್ಲಿ ಅಭಿನಂದನೆ ಮಾಡಲಾಯಿತು.
ಮಂಗಳೂರು ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕ ದೇವಜ್ಯೋತಿ ರೇಯವರ ಅಧ್ಯಕ್ಷತೆಯಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಜುಲೈ 27ರಂದು ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು. ಆ ಬಳಿಕ ಈ ಪ್ರಕರಣ ಜಿಲ್ಲೆಯಲ್ಲಿ ಕೋಮುಸೂಕ್ಷ್ಮ ವಾತಾವರಣವನ್ನು ಸೃಷ್ಟಿಸಿತ್ತು. ಯಾವುದೇ ಸುಳಿವು ಇರದ ಈ ಪ್ರಕರಣವನ್ನು ಭೇದಿಸಿ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಬೆಳ್ಳಾರೆ, ಸುಳ್ಯ, ಸುಬ್ರಹ್ಮಣ್ಯ, ಕಡಬ, ವಿಟ್ಲ, ಬೆಳ್ತಂಗಡಿ, ಪುತ್ತೂರು, ಬಂಟ್ವಾಳ ಸೇರಿದಂತೆ ದ.ಕ.ಜಿಲ್ಲಾ ಪೊಲೀಸ್ ಹಾಗೂ ಮಂಗಳೂರು ಪಶ್ಚಿಮ ವಲಯದ ಪೊಲೀಸ್ ಅಧಿಕಾರಿಗಳ ಮತ್ತು ಸಿಬ್ಬಂದಿಯ ತನಿಖಾ ತಂಡ ರಚಿಸಿ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲೂ ಆರೋಪಿಗಳ ಪತ್ತೆಗೆ ಪ್ರಯತ್ನಿಸಲಾಗಿತ್ತು.
ಈ ತನಿಖಾ ತಂಡದಲ್ಲಿ 82ಮಂದಿ ಅಧಿಕಾರಿಗಳು, ಸಿಬ್ಬಂದಿ ಅವಿರತ ಶ್ರಮ ವಹಿಸಿ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿ ಕಂಬಿ ಹಿಂದೆ ಕಳುಹಿಸಿತ್ತು. ಅಲ್ಲದೆ ಈ ಸಂದರ್ಭದಲ್ಲಿ ಕೋಮುಸೂಕ್ಷ್ಮವಾದ ಈ ಪ್ರಕರಣದ ನಡೆದ ವೇಳೆ ಪುತ್ತೂರು, ಸುಳ್ಯ ಸೇರಿದಂತೆ ಕೆಲ ಪ್ರದೇಶಗಳಲ್ಲಿ ಸಾರ್ವಜನಿಕರು ನೆರೆದಿದ್ದರು. ಪ್ರಕರಣ ನಡೆದ ವೇಳೆ ಜನರನ್ನು ಹತೋಟಿಗೆ ತಂದು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿಯೂ ಪೊಲೀಸರು ಯಶಸ್ವಿಯಾಗಿದ್ದಾರೆ.
Kshetra Samachara
22/08/2022 06:19 pm