ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ; ಅಪರಾಧಿಯ ಆರೋಪ ಸಾಬೀತು

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ವ್ಯಕ್ತಿಯ ಮೇಲಿನ ಅಪರಾಧ ಸಾಬೀತಾಗಿದೆ ಎಂದು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್‌ಟಿಎಸ್‌ಸಿ-1 (ಪೊಕ್ಸೊ) ನ್ಯಾಯಾಲಯ ಆದೇಶಿಸಿದೆ.

ಬೆಳ್ತಂಗಡಿ ತಾಲೂಕಿನ ನೆರಿಯ ನಿವಾಸಿ ಪಿ.ಜೆ. ಜೇಕಬ್ ಯಾನೆ ಚಾಕೋಚ‌ ಎಂಬಾತ ಅತ್ಯಾಚಾರ ಅಪರಾಧಿ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಈ ದಲಿತ ಬಾಲಕಿಯನ್ನು 2015ರ ಫೆಬ್ರವರಿಯಲ್ಲಿ ಪಿ.ಜೆ. ಜೇಕಬ್ ಬಲವಂತವಾಗಿ ಮನೆಯೊಳಗೆ ಕರೆದೊಯ್ದು ಅತ್ಯಾಚಾರವೆಸಗಿದ್ದ. ಅಲ್ಲದೆ ಈ ವಿಚಾರವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಒಡ್ಡಿದ್ದ. ಆ ಬಳಿಕವೂ ನಿರಂತರವಾಗಿ ಬಾಲಕಿಯೊಂದಿಗೆ ಬಲವಂತದಿಂದ ಲೈಂಗಿಕ ಸಂಪರ್ಕ ನಡೆಸಿದ್ದ. ಪರಿಣಾಮ ಬಾಲಕಿ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಳು. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು

ಡಿಎನ್‌ಎ ಪರೀಕ್ಷೆಯಲ್ಲಿ ಬಾಲಕಿ ಗರ್ಭಿಣಿಯಾಗಲು ಪಿ.ಜೆ.ಜೇಕಬ್ ನೇ ಕಾರಣ ಎಂಬುದು ದೃಢಪಟ್ಟಿತ್ತು. ಈ ಬಗ್ಗೆ ಎಎಸ್‌ಪಿ ರಾಹುಲ್ ಕುಮಾರ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣ ಕೈಗೆತ್ತಿಕೊಂಡ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್‌ಟಿಎಸ್‌ಸಿ-1 (ಪೊಕ್ಸೊ) ನ್ಯಾಯಾಲಯದ ನ್ಯಾಯಾಧೀಶೆ ಸಾವಿತ್ರಿ ವಿ. ಭಟ್ 14 ಸಾಕ್ಷಿಗಳನ್ನು ವಿಚಾರಣೆ ನಡೆಸಿದ್ದರು. ಪಿ.ಜೆ.ಜೇಕಬ್ ಮೇಲಿನ ಅಪರಾಧ ಸಾಬೀತಾಗಿರುವುದಾಗಿ ತೀರ್ಪು ನೀಡಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ಸೋಮವಾರ ಪ್ರಕಟಿಸುವ ಸಾಧ್ಯತೆ ಇದೆ. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ (ಪೊಕ್ಸೊ) ವೆಂಕಟರಮಣ ಸ್ವಾಮಿ ಸಿ. ವಾದಿಸಿದ್ದರು.

Edited By : Nagaraj Tulugeri
Kshetra Samachara

Kshetra Samachara

23/10/2021 09:32 pm

Cinque Terre

13.78 K

Cinque Terre

1