ಗಂಗೊಳ್ಳಿ: ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ವ್ಯಕ್ತಿಯೋರ್ವರು ಸಜೀವ ದಹನವಾದ ದಾರುಣ ಘಟನೆ ಜಿಲ್ಲೆಯ ಗಂಗೊಳ್ಳಿಯಲ್ಲಿ ಇಂದು ಸಂಭವಿಸಿದೆ.
ಗಂಗೊಳ್ಳಿ ಗ್ರಾಮದ ದೊಡ್ಡಹಿತ್ಲು ನಿವಾಸಿ ಗಣೇಶ್ ಖಾರ್ವಿ (42)ಬೆಂಕಿ ಅವಘಡದಿಂದ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಗಂಗೊಳ್ಳಿಯಲ್ಲಿ ಮೀನುಗಾರಿಕೆ ಬೋಟಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಗಣೇಶ ಖಾರ್ವಿ ಇಂದು ಮನೆಯಲ್ಲಿ ಮಲಗಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಬೆಳಿಗ್ಗೆ ಸುಮಾರು 8.30ರ ಹೊತ್ತಿಗೆ ಮನೆಯಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಗಣೇಶ ಖಾರ್ವಿ ಮಂಚದ ಮೇಲೆ ಮಲಗಿದ್ದಲ್ಲೆ ಸುಟ್ಟು ಸಜೀವ ದಹನಗೊಂಡಿದ್ದಾರೆ. ಮೃತ ಗಣೇಶ್ ಹೊಸ ಮನೆ ಕಟ್ಟುತ್ತಿದ್ದು ಮನೆ ಸಮೀಪದಲ್ಲೇ ಪುಟ್ಟ ಗುಡಿಸಲಿನಲ್ಲಿ ಪತ್ನಿ ಜೊತೆ ವಾಸಿಸುತ್ತಿದ್ದರು. ಗುಡಿಸಲಿನಲ್ಲಿ ದಟ್ಟ ಹೊಗೆ ಆವರಿಸಿದಾಗ ಅಕ್ಕಪಕ್ಕದ ಮನೆಯವರು ಮನೆಗೆ ತಗುಲಿದ ಬೆಂಕಿಯನ್ನು ನಂದಿಸುವ ಕಾರ್ಯ ಕೈಗೊಂಡಿದ್ದಾರೆ.ಆದರೆ ಗಣೇಶ ಖಾರ್ವಿ ಮನೆಯ ಒಳಗೆ ಇರುವುದು ಯಾರಿಗೂ ತಿಳಿದಿರಲಿಲ್ಲ ಎನ್ನಲಾಗಿದೆ. ಬಳಿಕ ಸ್ಥಳೀಯರು ಮನೆಗೆ ಹೊತ್ತಿಕೊಂಡ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
03/04/2022 02:10 pm