ಉಡುಪಿ: ರಾಜ್ಯದ ಪ್ರತಿಷ್ಠಿತ ನಾಟಕ ಸಂಸ್ಥೆಗಳಲ್ಲಿ ಒಂದಾದ ರಂಗಭೂಮಿ ಉಡುಪಿ ಆಯೋಜಿಸುವ 42 ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆಯ ಉದ್ಘಾಟನೆ ಡಿ.11ರಂದು ಸಂಜೆ 5.45ಕ್ಕೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ರಂಗಭೂಮಿ ಉಡುಪಿ ಅಧ್ಯಕ್ಷ ಡಾ| ತಲ್ಲೂರು ಶಿವರಾಮ ಶೆಟ್ಟಿ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸುಪ್ರಸಾದ್ ಶೆಟ್ಟಿ, ಬೈಕಾಡಿ, ಉದ್ಯಮಿ ಸತ್ಯಾನಂದ ನಾಯಕ್ ಆತ್ರಾಡಿ, ಕಾಲೇಜಿನ ಪ್ರಾಂಶುಪಾಲ ದೇವಿದಾಸ್ ಎಸ್.ನಾಯ್ಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕ ಕುಮಾರ ಬಿಕ್ಕೇರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಈ ಸ್ಪರ್ಧೆಯಲ್ಲಿ ಜಿಲ್ಲಾವಾರು ಬೆಂಗಳೂರಿನ 3, ಉಡುಪಿಯ 2, ಮೈಸೂರಿನ 2, ಧಾರವಾಡದ 1, ಶಿವಮೊಗ್ಗದ 1 ಹಾಗೂ ಮಂಗಳೂರಿನ 1 ತಂಡಗಳು ಭಾಗವಹಿಸಲಿದ್ದು, ಒಟ್ಟು 10 ದಿನ, 10 ನಾಟಕಗಳು ಡಿ.11ರಿಂದ 20ರ ವರೆಗೆ ಪ್ರದರ್ಶನಗೊಳ್ಳಲಿವೆ ಎಂದರು.
ಈ ಬಾರಿ ಪ್ರಥಮ ಬಹುಮಾನ ಪಡೆದ ತಂಡಕ್ಕೆ 35 ಸಾವಿರ ರೂ, ದ್ವಿತೀಯ 25 ಸಾವಿರ ರೂ., ತೃತೀಯ 15 ಸಾವಿರ ರೂ. ಅಲ್ಲದೆ ಶ್ರೇಷ್ಠ ನಿರ್ದೇಶನ, ನಟ-ನಟಿ, ಪ್ರಸಾದನ, ರಂಗಪರಿಕರ, ಸಂಗೀತ, ಬೆಳಕು, ಹಾಸ್ಯನಟ, ಬಾಲನಟ ಈ ಎಲ್ಲ ವಿಭಾಗಗಳಿಗೆ ನಗದು ಸಹಿತ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ಪ್ರಧಾನ ಕಾರ್ಯದರ್ಶಿ ಪ್ರದೀಪ್ ಚಂದ್ರ ಕುತ್ಪಾಡಿ ಹೇಳಿದರು. ಉಪಾಧ್ಯಕ್ಷ ಭಾಸ್ಕರ್ ರಾವ್ ಕಿದಿಯೂರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Kshetra Samachara
10/12/2021 04:03 pm