ಉಡುಪಿ: ಡಾ. ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ ದೊಡ್ಡಣಗುಡ್ಡೆಯಲ್ಲಿ ಹೊಸ ವರ್ಷದ ದಿನದಂದು 29ನೇ ಮದ್ಯವ್ಯಸನ ವಿಮುಕ್ತಿ ಮತ್ತು ವಸತಿ ಶಿಬಿರ ಉದ್ಘಾಟನೆಗೊಂಡಿತು. ಭಾರತೀಯ ಮನೋವೈದ್ಯಕೀಯ ಕರ್ನಾಟಕ ಶಾಖೆಯ ಅಧ್ಯಕ್ಷ ಡಾ. ಕಿರಣ್ ಕುಮಾರ್ ಪಿ.ಕೆ ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, 29ನೇ ಮದ್ಯವ್ಯಸನ ವಿಮುಕ್ತಿ ಶಿಬಿರ ಎಂದು ಕೇಳಿ ನಾನು ಆಶ್ಚರ್ಯ ಪಟ್ಟೆ. ಮದ್ಯವ್ಯಸನ ವಿಮುಕ್ತಿ ಶಿಬಿರ ನಡೆಸುವುದು ಅಷ್ಟು ಸುಲಭದ ಮಾತಲ್ಲ. ಸಾವಿರದ ಎಂಟು ನೂರಕ್ಕೂ ಅಧಿಕ ಮದ್ಯವ್ಯಸನಿಗಳಿಗೆ ಚಿಕಿತ್ಸೆ ನೀಡುವ ಮೂಲಕ ಇಡೀ ರಾಜ್ಯಕ್ಕೆ ಈ ಆಸ್ಪತ್ರೆ ಮಾದರಿಯಾಗಿದೆ ಎಂದರು.
ಕಮಲ್ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬೈ, ರೋಟರಿ ಕ್ಲಬ್ ಉಡುಪಿ-ಮಣಿಪಾಲ, ಹಾಜಿ ಅಬ್ದುಲ್ಲಾ ಚಾರಿಟೇಬಲ್ ಟ್ರಸ್ಟ್ ಉಡುಪಿ, ಭಾರತೀಯ ವೈದ್ಯಕೀಯ ಸಂಘ ಉಡುಪಿ- ಕರಾವಳಿ, ಭಾರತೀಯ ಮನೋವೈದ್ಯಕೀಯ ಸಂಘ ಕರ್ನಾಟಕ ಶಾಖೆ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಮಾರಂಭದ ಅಧ್ಯಕ್ಷತೆಯನ್ನು ಡಾ. ಎ.ವಿ.ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕರಾದ ಡಾ.ಪಿ.ವಿ.ಭಂಡಾರಿ ವಹಿಸಿದ್ದರು.ಮಣಿಪಾಲ ಪೊಲೀಸ್ ಠಾಣೆಯ ನಿರೀಕ್ಷಕ ಮಂಜುನಾಥ ಎಂ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಅಧ್ಯಕ್ಷ ವಿನಾಯಕ ಶೆಣೈ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಹೇಮಂತ್, ಮನೋವೈದ್ಯ ವಿರೂಪಾಕ್ಷ ದೇವರುಮನೆ, ಆಪ್ತ ಸಮಾಲೋಚಕ ಗಿರೀಶ್ ಎಂ ಎನ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
01/01/2022 05:17 pm