ಉಡುಪಿ : ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ವ್ಯಾಪ್ತಿಯ ದ.ಕ.ಜಿಲ್ಲಾ ಪದ್ಮಶಾಲಿ ಮಹಾಸಭಾವು 75ವರ್ಷಗಳನ್ನು ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ಅಮೃತ ಸಂಭ್ರಮವನ್ನು ಆ.27 ಹಾಗೂ 28ರಂದು ಮುಲ್ಕಿ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ಪುರಂದರ ಡಿ.ಶೆಟ್ಟಿಗಾರ್ ಕಿನ್ನಿಗೋಳಿ ತಿಳಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜ ಬಂಧುಗಳಲ್ಲಿ ಏಕತೆಯನ್ನು ಸಾಧಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಎರಡು ದಿನಗಳ ಈ ಕಾರ್ಯಕ್ರಮದಲ್ಲಿ 15 ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಆ.27ರಂದು ಬೆಳಗ್ಗೆ 9.30ಕ್ಕೆ ಅಮೃತ ಮಹೋತ್ಸವವನ್ನು ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಉದ್ಘಾಟಿಸಲಿರುವರು. ಶ್ರೀಕ್ಷೇತ್ರ ಕಟೀಲು ವೇದ ಮೂರ್ತಿ ಕೆ.ಲಕ್ಷ್ಮೀನಾರಾಯಣ ಅಸ್ರಣ್ಣ ಆಶೀರ್ವಚನ ನೀಡಲಿರವರು. ಈ ಸಂದರ್ಭದಲ್ಲಿ ಮಾಜಿ ಯೋಧರು ಹಾಗೂ ನಿವೃತ್ತ ಪೊಲೀಸರನ್ನು ಸನ್ಮಾನಿಸಲಾಗುವುದು. ವಿದ್ಯಾರ್ಥಿ ವೇತನ ವಿತರಣೆ, ಮಹಿಳಾ ಸಮಾವೇಶ, ಸಮಾಜ ಸಂಬಂಧಿ ವಿವಿಧ ಗೋಷ್ಠಿಗಳು ನಡೆಯಲಿವೆ.
28ರಂದು ರಕ್ತದಾನ ಶಿಬಿರ, ನೇತ್ರ ತಪಾಸಣಾ ಶಿಬಿರ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ. ಅಪರಾಹ್ನ 3 ಗಂಟೆಗೆ ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭದಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.
Kshetra Samachara
25/08/2022 05:06 pm