ಕುಂದಾಪುರ: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬವನ್ನು ಅವರದೇ ಆಶಯದಂತೆ ರಕ್ತದಾನ, ಆರೋಗ್ಯ ಶಿಬಿರ, ಬಡವರಿಗೆ ನೆರವಾಗುವಂತಹ ಸೇವಾ ಕಾರ್ಯಕ್ರಮವನ್ನಾಗಿ ಆಚರಿಸಲಾಯಿತು. ರಕ್ತದಾನ ಮಹತ್ತರವಾದ ಕಾರ್ಯ ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಕುಂದಾಪುರ ಮಂಡಲ, ಯುವ ಮೋರ್ಚಾ ಕುಂದಾಪುರದ ವತಿಯಿಂದ ಸೇವಾ ಪಾಕ್ಷಿಕದ ಅಂಗವಾಗಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಸಹಯೋಗದಲ್ಲಿ ಇಲ್ಲಿನ ರಕ್ತನಿಧಿ ಕೇಂದ್ರದಲ್ಲಿ ಆಯೋಜಿಸಿದ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ, ಮಾತನಾಡಿದರು.
ವಿಜ್ಞಾನ ಎಷ್ಟೇ ಮುಂದುವರಿದರೂ ರಕ್ತಕ್ಕೆ ಪರ್ಯಾಯ ರಕ್ತವೇ ಹೊರತು ಬೇರೆ ಯಾವುದು ಕೊಡಲು ಸಾಧ್ಯವಿಲ್ಲ. ರಕ್ತದಾನದ ಬಗ್ಗೆ ಎಲ್ಲರಲ್ಲಿಯೂ ಜಾಗೃತಿ ಇನ್ನಷ್ಟು ಹೆಚ್ಚಾಗಬೇಕಿದೆ ಎಂದ ಅವರು, ಕುಂದಾಪುರದ ರೆಡ್ ಕ್ರಾಸ್ ಘಟಕದ ಕಟ್ಟಡ ಬಾಡಿಗೆ ವಿಚಾರವನ್ನು ಸಮಿತಿ ಸಭೆಯಲ್ಲಿ ಪ್ರಸ್ತಾವಿಸಿ, ಪರಿಹಾರಕ್ಕೆ ಯತ್ನಿಸುವುದಾಗಿ ಶಾಸಕರು ಭರವಸೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ರೆಡ್ ಕ್ರಾಸ್ ಘಟಕದ ಅಧ್ಯಕ್ಷ ಎಸ್. ಜಯಕರ ಶೆಟ್ಟಿ ಮಾತನಾಡಿ, ನಮ್ಮ ಘಟಕದ ಆಶ್ರಯದಲ್ಲಿ ವರ್ಷಕ್ಕೆ 75-80 ರಕ್ತದಾನ ಶಿಬಿರ ನಡೆಯುತ್ತಿದೆ. 10 ಸಾವಿರಕ್ಕೂ ಅಧಿಕ ಯೂನಿಟ್ ರಕ್ತ ಸಂಗ್ರಹವಾಗುತ್ತಿದೆ. ಜನೌಷಧಿ ಕೇಂದ್ರದಲ್ಲೂ ದಿನಕ್ಕೆ 400-500 ಮಂದಿ ಪ್ರಯೋಜನ ಪಡೆಯುವಂತಾಗಿದೆ ಎಂದವರು ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಅಂಗವಾಗಿ ಬಿಜೆಪಿ ವತಿಯಿಂದ ಸೇವಾ ಪಾಕ್ಷಿಕ ಕಾರ್ಯಕ್ರಮದಡಿ ರಕ್ತದಾನ, ಸ್ವಚ್ಛತಾ ಕಾರ್ಯಕ್ರಮ, ಅಂಗನವಾಡಿ ದತ್ತು ಕಾರ್ಯಕ್ರಮ ಸಹಿತ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮಂಡಲದ ಅಧ್ಯಕ್ಷ ಶಂಕರ ಅಂಕದಕಟ್ಟೆ ತಿಳಿಸಿದರು.
ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಕುಂದಾಪುರ ಪುರಸಭಾಧ್ಯಕ್ಷೆ ವೀಣಾ ಭಾಸ್ಕರ್ ಮೆಂಡನ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಜಯ ಎಸ್. ಪೂಜಾರಿ, ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರಣಿ ಸದಸ್ಯ ಪ್ರಜ್ವಲ್, ಜಿಲ್ಲಾ ಪ್ರ.ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ರೆಡ್ ಕ್ರಾಸ್ ಘಟಕದ ಪದಾಧಿಕಾರಿಗಳು, ಸಿಬಂದಿ ಉಪಸ್ಥಿತರಿದ್ದರು.
Kshetra Samachara
18/09/2022 03:20 pm