ಮಂಗಳೂರು: ವಿಶ್ವ ಯುವ ಕೌಶಲ್ಯ ದಿನಾಚರಣೆ ಅಂಗವಾಗಿ ನಡೆದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾಗಿದ್ದ ಬೆಂದೂರಿನ ಸಂತ ಆಗ್ನೆಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ.ವಿದ್ಯಾರ್ಥಿನಿ ಸೌಜನ್ಯಾ ಜೆ. ಮಂಗಳವಾರ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಯವರ ಒಂದು ದಿನ ಕಾರ್ಯಕಲಾಪಗಳಲ್ಲಿ ಭಾಗವಹಿಸುವ ಅವಕಾಶ ನೀಡಲಾಗಿತ್ತು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರ ನಿರ್ದೇಶನದಂತೆ ಕೌಶಲ್ಯಸ್ಪೂರ್ತಿ ಶೀರ್ಷಿಕೆಯಡಿ ಸೌಜನ್ಯಾರಿಗೆ ಈ ಅವಕಾಶ ನೀಡಲಾಗಿತ್ತು.
ಮಂಗಳವಾರ ಬೆಳಗ್ಗೆ 11 ಗಂಟೆಗೆ ಬಂಟ್ವಾಳ ತಾಲ್ಲೂಕಿನ ತಹಶೀಲ್ದಾರರ ಕಚೇರಿಯಲ್ಲಿ ಜಿಲ್ಲಾಧಿಕಾರಿಯವರ ತಾಲೂಕು ಭೇಟಿಯ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದರು. ಅಲ್ಲಿ ಜಿಲ್ಲಾಧಿಕಾರಿಯವರಿಗೆ ಸ್ಥಳೀಯರು ಸಲ್ಲಿಸಿರುವ ಕುಂದು ಕೊರತೆಗಳ ಅಹವಾಲುಗಳ ಸ್ವೀಕೃತಿ ಹಾಗೂ ಕೆಲವೊಂದು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಿದ ಕಾರ್ಯ ಚಟುವಟಿಕೆಗಳಲ್ಲಿ ಭಾಗಿಯಾದರು.
ಮಧ್ಯಾಹ್ನದ ಬಳಿಕ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್‌ನಲ್ಲಿ ನಡೆದ ಜಿಲ್ಲಾಧಿಕಾರಿಯವರ ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸಿ, ವೀಕ್ಷಣೆ ಮಾಡಿದರು. ಸಂಜೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಸೌಜನ್ಯರನ್ನು ಸನ್ಮಾನಿಸಿ, ಪ್ರಮಾಣ ಪತ್ರ ನೀಡಿ ಅಭಿನಂದಿಸಿದರು.
Kshetra Samachara
20/09/2022 11:36 pm