ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಸ್ವಲ್ಪ ಮಟ್ಟಿಗೆ ಹೆಚ್ಚುತ್ತಿರುವ ಕಾರಣ ಮತ್ತು ಇತ್ತೀಚಿಗೆ ಮುಖ್ಯಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ನಡೆಸಿ ಕೋವಿಡ್ ನಿಯಮಾವಳಿ ಕಟ್ಟು ನಿಟ್ಟಾಗಿ ಪಾಲಿಸುವಂತೆ ನಿರ್ದೇಶನ ನೀಡಿರುವುದರಿಂದ ಜಿಲ್ಲೆಯಲ್ಲಿ ಟೆಸ್ಟಿಂಗ್ ಪ್ರಮಾಣ ಹೆಚ್ಚಿಸುವುದು ಮತ್ತು ಶೇ.ನೂರು ಲಸಿಕಾಕರಣ ಮಾಡುವುದು ನಮ್ಮ ಮೊದಲ ಆದ್ಯತೆ ಎಂದು ಜಿ.ಪಂ ಸಿಇಒ ಡಾ.ನವೀನ್ ಭಟ್ ಹೇಳಿದ್ದಾರೆ.
ಕಾರ್ಯಕ್ರಮವೊಂದರ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು ಈ ಹಿಂದೆ ಮಾಡಿದಂತೆ ಜಿಲ್ಲೆಯಲ್ಲಿ ವಾರಕ್ಕೆ ಒಂದು ದಿನ ಮಾಸ್ಕ್ ಡ್ರೈವ್ ಕೈಗೊಳ್ಳುತ್ತೇವೆ.ಜನರು ಕೊರೋನಾ ಹೋಗಿದೆ ಎಂಬ ಭಾವನೆಯಲ್ಲಿದ್ದಾರೆ. ಆದರೆ ಹೊಸ ರೂಪಾಂತರಿ ಕೊರೋನಾ ಆತಂಕ ಉಂಟು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ವಿಡಿಯೋಕಾನ್ಫರೆನ್ಸ್ ಮೂಲಕ ಮಾತನಾಡಿದ್ದಾರೆ. ಜಿಲ್ಲೆಯಲ್ಲಿ ಲಸಿಕೆ ಪಡೆಯದವರ ಮನೆಗಳಿಗೆ ತೆರಳಿ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.ಇನ್ನು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಹೇಳಿದ್ದಾರೆ.
Kshetra Samachara
29/11/2021 01:26 pm