ಉಡುಪಿ: ಆರ್ಥಿಕವಾಗಿ ತೀರಾ ಹಿಂದುಳಿದ ಪರಿಶಿಷ್ಟ ಪಂಗಡ, ಆದಿವಾಸಿ ಬುಡಕಟ್ಟು ಸಮುದಾಯ, ಕೊರಗ ಜನಾಂಗದವರು ತೀವ್ರ ತರಹದ ಖಾಯಿಲೆಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಲ್ಲಿ ಅವರ ವೈದ್ಯಕೀಯ ವೆಚ್ಚವನ್ನು ಈ ಹಿಂದಿನಂತೆಯೇ ಸರ್ಕಾರದ ವತಿಯಿಂದ ಮರುಪಾವತಿಸುವಂತೆ ಶಾಸಕ ಕೆ ರಘುಪತಿ ಭಟ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀರಾಮುಲು ಅವರಿಗೆ ಮನವಿ ಮಾಡಿದ್ದಾರೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಪರಿಶಿಷ್ಟ ಪಂಗಡ, ಆದಿವಾಸಿ ಬುಡಕಟ್ಟು ಸಮುದಾಯ, ಕೊರಗ ಜನಾಂಗದವರ ವೈದ್ಯಕೀಯ ವೆಚ್ಚವನ್ನು 2023ನೇ ಸಾಲಿನಿಂದ ನಿಗದಿಪಡಿಸಿದ ಅನುದಾನದಲ್ಲಿ ವೈದ್ಯಕೀಯ ವೆಚ್ಚ ಮರುಪಾವತಿಗೆ ಒಂದು ಬಾರಿ ಮಾತ್ರ ಷರತ್ತಿಗೊಳಪಟ್ಟು ಮಂಜೂರಾತಿ ನೀಡಿ ಸರ್ಕಾರ ಆದೇಶಿಸಿದೆ. ಇದರಿಂದಾಗಿ ಆರ್ಥಿಕವಾಗಿ ತೀರ ದುರ್ಬಲರಾಗಿರುವ ಈ ಸಮುದಾಯದವರು ತೀವ್ರ ತರಹದ ಖಾಯಿಲೆಗಳಿಗೆ ಉತ್ತಮವಾದ ಚಿಕಿತ್ಸೆ ಪಡೆಯಲು ಅಸಾಧ್ಯವಾಗಿರುತ್ತದೆ.
ಹೆಚ್ಚಾಗಿ ನಗರ ಪ್ರದೇಶದಿಂದ ದೂರವಿದ್ದು ಕಾಡಂಚಿನಲ್ಲಿ ವಾಸವಿರುವ ಈ ಸಮುದಾಯಗಳ ಮಂದಿ ರಕ್ತ ಹೀನತೆ, ಅಪೌಷ್ಟಿಕತೆ, ಟಿಬಿ, ಕ್ಯಾನ್ಸರ್, ಮಧುಮೇಹ ಮುಂತಾದ ತೀವ್ರ ತರಹದ ಕಾಯಿಲೆಗಳಿಗೆ ತುತ್ತಾದಾಗ ಸೂಕ್ತವಾದ ಚಿಕಿತ್ಸೆ ಪಡೆಯಲು ಸಾಧ್ಯವಾಗದೆ ಮರಣ ಹೊಂದುತ್ತಿರುವುದನ್ನು ಗಮನಿಸಲಾಗಿದೆ. ಅಲ್ಲದೆ ಈ ಸಮುದಾಯದವರಿಗೆ ವೈದ್ಯಕೀಯ ಚಿಕಿತ್ಸೆಗೆ ಸಂಬಂಧಿಸಿದಂತೆ ಸರ್ಕಾರದ ಯಾವುದೇ ವಿಮಾ ಯೋಜನೆಗಳು ಉಪಯುಕ್ತವಾಗದೆ ಇರುವುದರಿಂದ ವೈದ್ಯಕೀಯ ವೆಚ್ಚ ಮರುಪಾವತಿ ಅವಶ್ಯಕವಾಗಿರುತ್ತದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇರುವ ಪರಿಶಿಷ್ಟ ಪಂಗಡ, ನೈಜ ದುರ್ಬಳ ಬುಡಕಟ್ಟು ಸಮುದಾಯ, ಕೊರಗ ಸಮುದಾಯದವರಿಗೆ ವೈದ್ಯಕೀಯ ಚಿಕಿತ್ಸೆಗೆ ಸಂಬಂಧಿಸಿದಂತೆ ಈ ಹಿಂದಿನಂತೆಯೇ ವೈದ್ಯಕೀಯ ವೆಚ್ಚವನ್ನು ಮರುಪಾವತಿ ಮಾಡುವುದು ಹಾಗೂ ಈ ಸಮುದಾಯಗಳು ವಾಸವಾಗಿರುವ ಕಾಲೋನಿಗಳಲ್ಲಿ ವೈದ್ಯಕೀಯ ಶಿಬಿರಗಳನ್ನು ನಡೆಸುವಂತೆ ಮನವಿಯಲ್ಲಿ ತಿಳಿಸಿದ್ದಾರೆ. ಅಲ್ಲದೆ ಈ ಎಲ್ಲಾ ಸಮುದಾಯಗಳ ಸಂಕಷ್ಟಗಳು ಹಾಗೂ ವೈದ್ಯಕೀಯ ವೆಚ್ಚ ಮರುಪಾವತಿಯ ಅವಶ್ಯಕತೆಗಳ ಬಗ್ಗೆ ಸದನದಲ್ಲಿ ಸವಿಸ್ತಾರವಾಗಿ ವಿಷಯ ಮಂಡಿಸಲು ಅವಕಾಶ ಕೋರಿರುವುದಾಗಿ ತಿಳಿಸಿದ್ದಾರೆ.*
Kshetra Samachara
08/09/2022 04:16 pm