ಉಡುಪಿ: ಕೇಂದ್ರ ಮತ್ತು ರಾಜ್ಯ ಸರಕಾರದ ಭೂ ಮಸೂದೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರುದ್ಧ ದೇಶದ ಪ್ರತಿ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಹಿ ಸಂಗ್ರಹ ಮಾಡುತ್ತಿದ್ದು, ಅದರಂತೆ ಉಡುಪಿ ಜಿಲ್ಲೆಯಲ್ಲಿ ಪ್ರತಿ ಗ್ರಾಮದಿಂದ ಸಂಗ್ರಹಿಸಿದ ಸಹಿ ಪ್ರತಿಯನ್ನು ವಿಭಿನ್ನ ರೀತಿಯಲ್ಲಿ ಇಂದು ಬನ್ನಂಜೆಯಿಂದ ಕಡಿಯಾಳಿ ತನಕ ಸುಮಾರು 2 ಕಿ.ಮೀ. ದೂರದವರೆಗೆ ಸಹಿ ಸಂಗ್ರಹ ಪ್ರದರ್ಶನ ಮಾಡಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೇತೃತ್ವದಲ್ಲಿ ಅಭಿಯಾನ ಬನ್ನಂಜೆಯಿಂದ ಪ್ರಾರಂಭಗೊಂಡಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ,ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಈ ಅಭಿಯಾನದಲ್ಲಿ ಪಾಲ್ಗೊಂಡರು.
ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ಬದಿ ನಿಂತು ಸಹಿ ಸಂಗ್ರಹ ಬ್ಯಾನರನ್ನು ಸಾರ್ವಜನಿಕರಿಗೆ ಪ್ರದರ್ಶಿಸಿದರು. ಈ ಮೂಲಕ ರಾಜ್ಯ, ರಾಷ್ಟ್ರದ ಬಿಜೆಪಿ ಸರ್ಕಾರದಿಂದ ಸಾರ್ವಜನಿಕರಿಗೆ ಆಗುವ ತೊಂದರೆಗಳನ್ನು ಗಮನಕ್ಕೆ ತರುವ ಪ್ರಯತ್ನ ನಡೆಸಿದರು. ಸಹಿ ಸಂಗ್ರಹವನ್ನು ರಾಷ್ಟ್ರಪತಿಗಳ ಗಮನಕ್ಕೆ ತಂದು ರೈತ ವಿರೋಧಿ ಮಸೂದೆ ಹಿಂಪಡೆಯುವಂತೆ ಮುಂದಿನ ದಿನಗಳಲ್ಲಿ ಒತ್ತಾಯಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡರು ಹೇಳಿದರು. ರಾಜ್ಯ ಮತ್ತು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ಬಿಜೆಪಿಗೆ ಧಿಕ್ಕಾರ, ರೈತ ವಿರೋಧಿ ಕಾಯಿದೆಗೆ ಧಿಕ್ಕಾರ ಎಂಬ ಭಿತ್ತಿಪತ್ರ ಪ್ರದರ್ಶನ ಮಾಡಿದರು.
Kshetra Samachara
17/11/2020 12:03 pm