ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ವಿಧಿಸಿದ್ದ ವಾರಾಂತ್ಯ ನಿರ್ಬಂಧಗಳನ್ನು ತೆರವುಗೊಳಿಸಿ ಷರತ್ತುಗಳೊಂದಿಗೆ ಸೇವೆ ಹಾಗೂ ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಅವಕಾಶ ನೀಡಿ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.
ಆದರೆ ದೇವಾಲಯಗಳಲ್ಲಿ ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆಡಳಿತ ಮಂಡಳಿಯು ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿ ಹೊಂದಿರಬೇಕು. ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಆಡಳಿತ ಮಂಡಳಿ, ಅರ್ಚಕರು, ಸಿಬ್ಬಂದಿ ಸೇರಿದಂತೆ ಎಲ್ಲರೂ ಪ್ರತಿ 15 ದಿನಗಳಿಗೊಮ್ಮೆ ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಿ ನೆಗೆಟಿವ್ ವರದಿಯನ್ನು ಪಡೆದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ.
ಅದೇ ರೀತಿ ಭಕ್ತಾದಿಗಳು ಎರಡು ಡೋಸ್ ಲಸಿಕೆ ಪಡೆದಿದ್ದರೂ ಕಡ್ಡಾಯವಾಗಿ 72 ಗಂಟೆಗಳಿಗಿಂತ ಮುಂಚಿತ ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿ ಹೊಂದಿದ್ದಲ್ಲಿ ಮಾತ್ರ ಸೇವೆಗೆ ಅವಕಾಶ ನೀಡಬೇಕು. ಜಾಗೃತಿ ಮೂಡಿಸಲು ಅಲ್ಲಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕು. ಕೋವಿಡ್ ಲಸಿಕೆ ಪಡೆಯದಿದ್ದ ಭಕ್ತರಿಗೆ ಲಸಿಕೆ ನೀಡಲು ಅನುಕೂಲವಾಗುವಂತೆ ಸಂಬಂಧಪಟ್ಟ ತಾಲೂಕು ಆರೋಗ್ಯಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ದೇವಸ್ಥಾನಗಳಲ್ಲಿ ಕೋವಿಡ್ ಲಸಿಕೆ ಕೇಂದ್ರ ತೆರೆಯಲು ಹಾಗೂ ಜನಸಂದಣಿಯಾಗದಂತೆ ಲಸಿಕೆ ನೀಡಲು ಕ್ರಮ ವಹಿಸಬೇಕು.
ದೇವಾಲಯದಲ್ಲಿ ಕನಿಷ್ಠ ಸಂಖ್ಯೆಯಲ್ಲಿ ಸೇವೆಗಳನ್ನು ನಡೆಸಲು ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
Kshetra Samachara
18/09/2021 09:23 pm