ಕಾರ್ಕಳ: ಕಾರ್ಕಳ ನಗರದಲ್ಲಿ ನಿರ್ಮಾಣಗೊಳ್ಳಲಿರುವ ತಾಲೂಕು ಮಟ್ಟದ ಡಾ.ಬಿ.ಆರ್.ಅಂಬೇಡ್ಕರ್ ಭವನಕ್ಕೆ 6 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದೆ ಎಂದು ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದ್ದಾರೆ.
ಈ ಮೊದಲು ಇದೇ ಅಂಬೇಡ್ಕರ್ ಭವನ ನಿರ್ಮಾಣಕ್ಕೆ 1.50 ಕೋಟಿರೂ. ಅನುದಾನ ಬಿಡುಗಡೆಗೊಂಡು ಕಾಮಗಾರಿ ಆರಂಭಿಸಲು ಸಿದ್ಧತೆಗಳು ನಡೆದಿದ್ದವು. ಆದರೆ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯ ಪರಿಶಿಷ್ಟ ಜಾತಿ ಸಮುದಾಯದ ಜನರಿದ್ದು ಹಲವಾರು ದಲಿತ ಸಂಘಟನೆಗಳು ಕಾರ್ಯನಿರ್ವಹಿಸುತ್ತಿವೆ.
ದಲಿತ ಸಂಘಟನೆಗಳು ಸೇರಿದಂತೆ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ನಡೆಸುವ ಕಾರ್ಯಕ್ರಮಗಳಿಗೆ ಸಭಾಂಗಣದ ಕೊರತೆ ಮನಗಂಡು ಎಲ್ಲ ಸೌಲಭ್ಯಗಳನ್ನೊಳಗೊಂಡ ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಾಣ ಮಾಡುವ ಸಂಕಲ್ಪದೊಂದಿಗೆ ಹಿಂದಿನ 1.50 ಕೋಟಿ ರೂ. ಅನುದಾನ ಜತೆಗೆ ಹೆಚ್ಚುವರಿಯಾಗಿ 4.50 ಕೋಟಿ ರೂ. ಅನುದಾನ ಬಿಡುಗಡೆಗೊಳಿಸುವ ಮೂಲಕ ಒಟ್ಟು 6 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಗೊಳ್ಳಲಿದೆ.
ನೂತನವಾಗಿ ನಿರ್ಮಾಣಗೊಳ್ಳಲಿರುವ ಅಂಬೇಡ್ಕರ್ ಭವನ ವಿಶಾಲವಾದ ಸಭಾಂಗಣ, ಊಟದ ಹಾಲ್, ಅಡುಗೆ ಕೋಣೆ ಹಾಗೂ ವಿಶ್ರಾಂತಿ ಕೊಠಡಿಗಳು ಒಳಗೊಂಡು ಸಮುದಾಯದ ಎಲ್ಲರಿಗೂ ಅನುಕೂಲವಾಗಲಿದೆ. ಪ್ರಸ್ತುತ ಕಾರ್ಕಳ ನಗರದಲ್ಲಿ ಕಿರಿದಾದ ಅಂಬೇಡ್ಕರ್ ಭವನ ಇದ್ದು, ಸಮುದಾಯದ ಜನರ ಹಾಗೂ ಸಂಘಟನೆಗಳ ಕಾರ್ಯಕ್ರಮಗಳಿಗೆ ಸುಸಜ್ಜಿತ ಭವನದ ಕೊರತೆಯಿತ್ತು.
Kshetra Samachara
12/07/2022 04:22 pm