ಸುಳ್ಯ: 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ 1837ರ ಅಮರ ಸುಳ್ಯದ ಸ್ವಾತಂತ್ರ್ಯ ಸಮರದ ದಿನಾಚರಣೆಯ ಪ್ರಯುಕ್ತ ಪೂರ್ವಭಾವಿ ಸಭೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಅಧ್ಯಕ್ಷತೆ ವಹಿಸಿ ಮಾತನಾಡಿ ‘ನಮ್ಮ ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಹೆಚ್ಚು ಜನರಿಗೆ ಗೊತ್ತಿಲ್ಲ. ಅದನ್ನು ಜಿಲ್ಲೆಗೆ ಮತ್ತು ದೇಶಕ್ಕೆ ತಿಳಿಸುವ ಕೆಲಸ ಆಗಬೇಕು. ಇದು ಜಿಲ್ಲಾ ಮಟ್ಟದ ಕಾರ್ಯಕ್ರಮವಾಗಿ ರೂಪುಗೊಳ್ಳಬೇಕು.ಎಲ್ಲರೂ ಒಟ್ಟಾಗಿ ಸೇರಿ ಆಚರಿಸುವಂತಾಗಬೇಕು ಎಂದರು.
ಮಂಗಳೂರಿನ ಬಾವುಟಗುಡ್ಡೆಯಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಸುಳ್ಯದಿಂದ 5 ಸಾವಿರ ಜನರು ಹೋಗಬೇಕೆನ್ನುವ ನಿರ್ಧಾರ ಮಾಡಿಕೊಳ್ಳಲಾಗಿದೆ. ಉಬರಡ್ಕ ಕೆದಂಬಾಡಿ ರಾಮಯ್ಯ ಗೌಡರ ಸ್ವಕ್ಷೇತ್ರವಾಗಿರುವುದರಿಂದ ಅಲ್ಲಿಯವರ ಅಪೇಕ್ಷೆಯಂತೆ ಉಬರಡ್ಕದಿಂದಲೇ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಕುರಿತು ಚಿಂತಿಸಲಾಗುವುದು ಎಂದರು.
ಇನ್ನು ಈ ಕಾರ್ಯಕ್ರಮ ಯಶಸ್ವಿಯಾಗಿ ಆಗುವುದರ ಜೊತೆಗೆ ಪರಿಣಾಮಕಾರಿಯಾಗಿ ಮಾಡಲಾಗುವುದು. ಯಶಸ್ಸಿಗೆ ಸಮಿತಿಯನ್ನು ರಚಿಸಿಕೊಂಡು, ಮೆರವಣಿಗೆ ನಡೆಸುವ ಬಗ್ಗೆ, ಟ್ಯಾಬ್ಲ್ಯೋ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳುವುದು ಇತ್ಯಾದಿ ವಿಚಾರಗಳ ಕುರಿತು ಸಮಿತಿಯಲ್ಲಿ ನಿರ್ಧರಿಸಲಾಗುವುದು ಎಂದು ಸಚಿವರು ಹೇಳಿದರು.
Kshetra Samachara
15/07/2022 07:28 pm