ಮಂಗಳೂರು: ಹಿಜಾಬ್ ಹಾಗೂ ಕೇಸರಿ ವಿವಾದದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ ಕಾಪಾಡಲೆಂದು ಫೆ.14ರ ಬೆಳಗ್ಗೆ 6ರಿಂದ ಫೆ.19ರ ಸಂಜೆ 6ರವರೆಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳ ಸುತ್ತಮುತ್ತಲಿನ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.
ಈ ಹಿನ್ನೆಲೆಯಲ್ಲಿ ನಿರ್ಬಂಧಕಾಜ್ಞೆ ಜಾರಿಯ ಈ ಸಮಯದಲ್ಲಿ ಸಾರ್ವಜನಿಕವಾಗಿ ಯಾವುದೇ ರೀತಿಯ ಘೋಷಣೆಯನ್ನು ಕೂಗುವಂತಿಲ್ಲ. ಚಿತ್ರಗಳ ಪ್ರದರ್ಶನ ಯಾ ಪ್ರಸಾರ ಮಾಡುವುದು, ಪ್ರಕಟಣಾ ಪತ್ರಿಕೆಗಳ ಇತರ ಯಾವುದೇ ವಸ್ತುಗಳ ಪ್ರದರ್ಶನ, ಭಿತ್ತಿಪತ್ರಗಳನ್ನು ಅಂಟಿಸುವುವಂತಿಲ್ಲ. ಸಭ್ಯತನ ಸದಾಚಾರ, ಸಾರ್ವಜನಿಕ ಭದ್ರತಾ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗಲು ಪ್ರೇರೇಪಿಸುವ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಐವರು ಹಾಗೂ ಅದಕ್ಕಿಂತ ಹೆಚ್ಚು ಜನರು ಒಟ್ಟಾಗಿ ಸೇರುವುದನ್ನು ನಿಷೇಧಿಸಲಾಗಿದೆ.
ಮಾರಕಾಯುಧಗಳು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ. ಪಟಾಕಿಗಳನ್ನು ಸಿಡಿಸುವುದು, ಸ್ಫೋಟಕಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿಯ, ಅವರ ಮೃತದೇಹದ ಅಥವಾ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು ನಿಷೇಧಿಸಲಾಗಿದೆ. ಕಲ್ಲು, ಕ್ಷಿಪಣಿಗಳನ್ನು ಎಸೆಯುವ ಉಪಕರಣಗಳ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಲಾಗಿದೆ. ಸರ್ಕಾರಿ ಸಂಸ್ಥೆಗಳು, ಸಂಘಟನೆಗಳು ಹಾಗೂ ಕಾರ್ಯನಿರತ ಅಧಿಕಾರಿ ಸಿಬ್ಬಂದಿ ವಿರುದ್ಧ ನಿಂದಿಸುವಂತಹ ಯಾವುದೇ ಘೋಷಣೆಗಳನ್ನು ನಿಷೇಧಿಸಲಾಗಿದೆ. ಯಾವುದೇ ಜಾತಿ, ಧರ್ಮ, ಕೋಮು ಅಥವಾ ಸಾರ್ವಜನಿಕ ನೈಜಕತೆಗೆ ಭಾದಕ ಉಂಟು ಮಾಡಬಹುದಾದಂತಹ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಈ ನಿರ್ಬಂಧಕಾಜ್ಞೆಯು ಜಾರಿಯಲ್ಲಿರುವ ಪ್ರದೇಶದಲ್ಲಿ ಸರ್ಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ತಿಳಿಸಿದ್ದಾರೆ.
Kshetra Samachara
13/02/2022 11:02 pm