ಉಡುಪಿ: ಕೋವಿಡ್ ಸಂಕಷ್ಟದ ಕಾಲಘಟ್ಟದಲ್ಲಿ ಬಿಜೆಪಿಯಿಂದ ದಾಖಲೆ ಮಟ್ಟದಲ್ಲಿ ಆರೋಗ್ಯ ಶಿಬಿರಗಳು ನಡೆಯುತ್ತಿರುವುದು ಗ್ರಾಮೀಣ ಪ್ರದೇಶದ ಜನತೆಗೆ ವರದಾನವಾಗಿ ಪರಿಣಮಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಬಿಜೆಪಿ ಉಡುಪಿ ನಗರ ವ್ಯಾಪ್ತಿಯ ಅಂಬಲಪಾಡಿ- ಕಡೆಕಾರು ಮಹಾ ಶಕ್ತಿಕೇಂದ್ರದ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಭಾಗಿತ್ವದಲ್ಲಿ ಅಂಬಲಪಾಡಿ ಬಸ್ ನಿಲ್ದಾಣದ ಬಳಿ ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆಯಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಕೋವಿಡ್ ಲಸಿಕೆ ವಿತರಣಾ ಶಿಬಿರವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ ಕಾರ್ಯಕರ್ತರು ಕೇವಲ ರಾಜಕೀಯ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿರದೆ ನಿರಂತರ ಜನಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದಕ್ಕೆ ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳೇ ಸಾಕ್ಷಿ. ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಎಲ್ಲಾ ಮಂಡಲಗಳ ವ್ಯಾಪ್ತಿಯಲ್ಲಿ ಸೆ.17ರಿಂದ ಅ.7ರವರಿಗೆ 20 ದಿನಗಳ ಪರ್ಯಂತ ಸೇವೆ ಮತ್ತು ಸಮರ್ಪಣ ಅಭಿಯಾನವು ರಾಜ್ಯಕ್ಕೇ ಮಾದರಿಯಾಗಿ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಈ ಅಭಿಯಾನದ ಅಂಗವಾಗಿ 9 ವಿಧದ ಸೇವಾ ಕಾರ್ಯಗಳ ಸಹಿತ ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣೆ, ಉಚಿತ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ ಹಾಗೂ ಕಣ್ಣಿನ ಉಚಿತ ಶಸ್ತ್ರ ಚಿಕಿತ್ಸೆ ಇತ್ಯಾದಿ ಶಿಬಿರಗಳು ಹಲವಾರು ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆದು ಜನಮನ್ನಣೆ ಗಳಿಸಿದೆ. ಇಂದು ಕೇಂದ್ರ ಮತ್ತು ರಾಜ್ಯ ಸರಕಾರಗಳು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತಿವೆ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಅಲ್ಲಲ್ಲಿ ಸಂಘಟಿತರಾಗಿ ಜನತೆಗೆ ಸಾರ್ಥಕ ಆರೋಗ್ಯ ಸೇವೆಯನ್ನು ಒದಗಿಸುವ ಸತ್ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಪ್ರಶಂಸನೀಯ ಎಂದು ಕುಯಿಲಾಡಿ ಹೇಳಿದರು.
Kshetra Samachara
18/10/2021 05:52 pm