ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ "ಕೋಟಿ-ಚೆನ್ನಯ" ಹೆಸರಿಡುವಂತೆ ಆಗ್ರಹಿಸಿ ಕಾಂಗ್ರೆಸ್ ನಡೆಸಿದ ಪಂಜಿನ ಮೆರವಣಿಗೆ ವಿಮಾನ ನಿಲ್ದಾಣ ಪ್ರವೇಶ ದ್ವಾರವಿರುವ ಬಜ್ಪೆಯ ಕೆಂಜಾರು ಬಳಿ ಸಮಾಪ್ತಿಗೊಂಡಿತು.
ಈ ವೇಳೆ ವಿಮಾನ ನಿಲ್ದಾಣದ ಪ್ರವೇಶ ದ್ವಾರದ ಒಂದು ಬದಿಯ ರಸ್ತೆಯನ್ನು ತಡೆದು ಪ್ರತಿಭಟಿಸಿದ ಕಾರ್ಯಕರ್ತರು, ಅದಾನಿ ಕಂಪೆನಿಯ ನಾಮಕರಣಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೆ, ಈ ಸಂದರ್ಭ ಪ್ರವೇಶ ದ್ವಾರದ ಬಳಿ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಕಾಂಗ್ರೆಸ್ ನಾಯಕರೇ ತಡೆದು ನಿಲ್ಲಿಸಿದರು. ಈ ಸಂದರ್ಭ ಮಾತನಾಡಿದ ದ.ಕ. ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟಕ್ಕೆ ಸಿದ್ಧರಾಗುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.
ಮಾಜಿ ಸಚಿವ ಅಭಯಚಂದ್ರ ಜೈನ್, ಕಾಂಗ್ರೆಸ್ ದ.ಕ. ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ಸ್ಥಳದಲ್ಲಿ ಎಸಿಪಿ ಬೆಳ್ಳಿಯಪ್ಪ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
Kshetra Samachara
18/11/2020 10:21 pm