ಮಂಗಳೂರು: ಉತ್ತಮವಾದ ಶಿಕ್ಷಣವನ್ನು ನೀಡಿ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮವಹಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು.
ದ.ಕ. ಜಿಲ್ಲಾಡಳಿತ, ಜಿಪಂ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಗರದ ಜಪ್ಪಿನಮೊಗರು ಪ್ರೆಸ್ಟೀಜ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಉತ್ತಮವಾದ ಶಿಕ್ಷಣ ನೀಡಿ ಅವರಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಲು ಶ್ರಮಿಸುವ ಶಿಕ್ಷಕರು ವಿದ್ಯಾರ್ಥಿಗಳ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಏಳಿಗೆಗೆ ಕಾರಣಕರ್ತರಾಗಿದ್ದಾರೆ. ಪ್ರತಿ ಶಿಕ್ಷಕರು ತಮ್ಮ ವೃತ್ತಿಯನ್ನು ಶ್ರದ್ಧೆಯಿಂದ ನಿರ್ವಹಣೆ ಮಾಡಿದ್ದಲ್ಲಿ ಎಲ್ಲಾ ವಿದ್ಯಾರ್ಥಿಗಳ ಭವಿಷ್ಯವೂ ಉಜ್ವಲವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದರು.
ಕೋವಿಡ್ ಸಂಕಷ್ಟದ ಕಾಲದಲ್ಲೂ ಶಿಕ್ಷಕರ ಕರ್ತವ್ಯ ನಿರ್ವಹಣೆ ಅನನ್ಯ. ಭೌತಿಕವಾಗಿ ತರಗತಿ ನಡೆಸಲು ಸಾಧ್ಯವಾಗದ ಅವಧಿಯಲ್ಲಿ ಆನ್‌ಲೈನ್ ಮೂಲಕ ವಿದ್ಯಾರ್ಥಿಗಳನ್ನು ಪರೀಕ್ಷೆಗಳಿಗೆ ಸಿದ್ಧಪಡಿಸಿ, ಅವರನ್ನು ಉತ್ತಮವಾಗಿ ತಯಾರು ಮಾಡಿದ ಕೀರ್ತಿ ಶಿಕ್ಷಕರಿಗೆ ಸಲ್ಲುತ್ತದೆ ಎಂದು ಸಚಿವ ಎಸ್.ಅಂಗಾರ ಹೇಳಿದರು.
Kshetra Samachara
05/09/2021 03:19 pm