ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಎನ್ ಐ ಎ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದೆ ಎಂದು ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಸಚಿವೆ, ಪ್ರವೀಣ್ ನೆಟ್ಟಾರು ಯಾವುದೇ ವಿವಾದಗಳಿಲ್ಲದ ವ್ಯಕ್ತಿಯಾಗಿದ್ರು. ಹಿಂದೂ ಯುವಕರ ಹತ್ಯೆ ಮಾಡುವವರ ಮಾನಸಿಕತೆ ಏನೆಂದೇ ಅರ್ಥವಾಗುತ್ತಿಲ್ಲ. ಪ್ರವೀಣನನ್ನು ಹತ್ಯೆ ಮಾಡಿದವರಿಗೆ ಉಗ್ರ ಶಿಕ್ಷೆ ಆಗಬೇಕು ಎಂದು ಹೇಳಿದರು.
ಪ್ರವೀಣ್ ಕೊಲೆಯ ಹಿಂದಿನ ಶಕ್ತಿ ಯಾವುದು? ಫೈನಾನ್ಸ್ ಮಾಡಿದವರು ಯಾರು? ಹತ್ಯೆಗೆ ಕುಮ್ಮಕ್ಕು ಕೊಟ್ಟವರು ಯಾರು? ಆಶ್ರಯ ಕೊಟ್ಟವರು ಯಾರು? ಎಲ್ಲ ವಿಷಯಗಳ ಸಮಗ್ರ ತನಿಖೆಯನ್ನು ಎನ್ ಐ ಎ ಮಾಡುತ್ತಿದೆ. ಮುಂದೆ ಇಂತಹ ಘಟನೆಯಾಗದಂತೆ ಭಯ ಹುಟ್ಟಿಸಬೇಕು. ಯಾವುದೇ ಎಡರು ತೊಡರು ಬಂದರೂ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಕೇಂದ್ರ ಗೃಹ ಸಚಿವರಲ್ಲಿ ಕೇಳಿದ್ದೇನೆ. ನನ್ನ ಬೇಡಿಕೆಗೆ ಗೃಹ ಸಚಿವ ಅಮಿತ್ ಶಾ ಸ್ಪಂದಿಸಿದ್ದಾರೆ ಎಂದು ಹೇಳಿದರು.
ಪರೇಶ್ ಮೇಸ್ತಾ ಆರೋಪಿಗಳಿಗೆ ಬಿಜೆಪಿ ಮಣೆ ಹಾಕಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವೆ, ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಚರ್ಚೆ ಗಮನಿಸಿದ್ದೇನೆ. ಈ ಬಗ್ಗೆ ಎಲ್ಲಿ ತಪ್ಪಾಗಿದೆ ಎಂಬ ಬಗ್ಗೆ ಸರ್ಕಾರ ಗಮನ ಹರಿಸಿ ಕ್ರಮ ಜರುಗಿಸಬೇಕು. ಪರೇಶ್ ಮೇಸ್ತನ ಸಾವಿನ ಹಿನ್ನೆಲೆಯಲ್ಲಿ ನಾವೆಲ್ಲರೂ ಹೋರಾಟ ಮಾಡಿದ್ದೇವೆ. ಪರೇಶ್ ಮೇಸ್ತ ಕುಟುಂಬಕ್ಕೆ ಮತ್ತು ನಮ್ಮ ವಿಚಾರಧಾರೆಗೆ ಘಾಸಿಯಾಗುವ ಬೆಳವಣಿಗೆ ನಡೆಯಬಾರದು.ತಪ್ಪಾಗಿದ್ದರೆ ಅದನ್ನು ಸರಿಪಡಿಸಬೇಕು ಮತ್ತು ಆ ಕುರಿತು ತನಿಖೆಯಾಗಬೇಕು ಎಂದು ಸಚಿವರು ಹೇಳಿದ್ದಾರೆ.
PublicNext
13/08/2022 02:19 pm