ಉಡುಪಿ: ನೂತನ ಸಚಿವ ಸಂಪುಟದಲ್ಲಿ ಉಡುಪಿ ಜಿಲ್ಲೆಯ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಗುರುವಾರ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ, ರಾಜ್ಯ ಸಚಿವ ಸಂಪುಟದಲ್ಲಿ ಉಡುಪಿ ಜಿಲ್ಲೆಗೆ ಎರಡು ಸಚಿವ ಸ್ಥಾನ ನೀಡುವ ಮೂಲಕ ಜಿಲ್ಲೆಯ ಅಭಿವೃದ್ಧಿ ಹಾಗೂ ಪಕ್ಷ ಸಂಘಟನೆಗೆ ಬಿಜೆಪಿ ವರಿಷ್ಠರು ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇನ್ನಷ್ಟು ಆದ್ಯತೆ ನೀಡಿದಂತಾಗಿದೆ. ರಾಜ್ಯದಲ್ಲಿ ಯುವಕರು ಹಾಗೂ ಹಿರಿಯರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ಅಭಿವೃದ್ಧಿಗೆ ವೇಗ ದೊರೆತಂತಾಗಿದೆ. ನೂತನ ಸಚಿವ ಸಂಪುಟ ಕೋವಿಡ್ ಮತ್ತು ನೆರೆ ಹಾವಳಿಯ ಸಂಕಷ್ಟವನ್ನು ಸಮರ್ಥವಾಗಿ ಎದುರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಎಮ್. ಅಂಚನ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕ್ಕರ್ ಹಾಗೂ ಮಹಿಳಾ ಮೋರ್ಚಾದ ಜಿಲ್ಲಾ ಮತ್ತು ಮಂಡಲಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
06/08/2021 02:26 pm