ಕಾರ್ಕಳ:ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರಿಂದು ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿ ಮುಂದಿನ ದಿನಗಳಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಬದ್ದತೆಯಿಂದ ಕೆಲಸ ನಿರ್ವಹಿಸಿ , ಸಾರ್ವಜನಿಕ ಅರ್ಜಿಗಳನ್ನು ಕಾಲಮಿತಿಯಲ್ಲಿ ಸಕಾಲದಲ್ಲಿ ವಿಲೇವಾರಿ ಮಾಡಬೇಕು. ಸ್ಥಳೀಯ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಮುಖ್ಯವಾಗಿ ಭ್ರಷ್ಟಾಚಾರ ಮುಕ್ತ ಮತ್ತು ರಾಜ್ಯಕ್ಕೆ ಮಾದರಿಯಾಗುವಂತಹ ಸ್ವರ್ಣ ಕಾರ್ಕಳ ಹಾಗೂ ಸುಸಂಸ್ಕೃತ ಕಾರ್ಕಳ ಆಡಳಿತ ನೀಡಬೇಕು ಎಂದು ತಿಳಿಸಿದರು.
ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ, ಶಾಲೆ-ಕಾಲೇಜುಗಳು ಪ್ರಾರಂಭವಾಗುತ್ತಿದ್ದು ಎಲ್ಲಾ ಶಿಕ್ಷಕರಿಗೆ ಕಡ್ಡಾಯವಾಗಿ ಮತ್ತು ಕಾರ್ಮಿಕರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡುವ ಬಗ್ಗೆ ಕ್ರಮ ವಹಿಸುವುದು. ಮಕ್ಕಳ ತೀವ್ರ ನಿಗಾ ಘಟಕ ಮತ್ತು ಆಮ್ಲಜನಕ ಉತ್ಪಾದನಾ ಘಟಕಗಳನ್ನು ಇದೇ ತಿಂಗಳಲ್ಲಿ ಕಾರ್ಯರಂಭಿಸುವ ಬಗ್ಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಯಿತು.
ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಬ್ರಹ್ಮ ಮುಗ್ಗೆರ್ಕಳ, ಸತ್ಯಸಾರಮಣಿ ಮತ್ತು ಇತರ ದೈವಸ್ಥಾನಗಳ ಹೆಸರಲ್ಲಿ ಜಾಗ ಕಾಯ್ದಿರಿಸುವ ಬಗ್ಗೆ ಪ್ರಸ್ತಾವನೆಗಳನ್ನು ತಯಾರಿಸುವಂತೆ, 60 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರಿಗೆ ವೃದ್ಧಾಪ್ಯ ವೇತನ ಮಂಜೂರಾತಿ ಬಗ್ಗೆ ಮತ್ತು 94ಸಿ , 94ಸಿಸಿ, ಅಕ್ರಮ ಸಕ್ರಮ ಅರ್ಜಿಗಳ ವಿಲೇವಾರಿ ಬಗ್ಗೆ ಸಂಪೂರ್ಣ ಪ್ರಸ್ತಾವನೆ ತಯಾರಿಸುವಂತೆ ಹಾಗೂ ಕನ್ನಡ ಭವನ ಹಾಗೂ ಕೈಗಾರಿಕಾ ವಲಯಕ್ಕೆ ಸೂಕ್ತ ಜಮೀನು ಗುರುತಿಸುವಂತೆ ಸೂಚಿಸಿದರು.
Kshetra Samachara
09/08/2021 05:10 pm