ಮಂಗಳೂರು: ಮನಪಾ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ ವಿವಿಧ ಕಾಮಗಾರಿಗಳ ಸಮರ್ಪಕ ಅನುಷ್ಠಾನ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಸಂಬಂಧಿಸಿದ ಇಲಾಖೆಯ ರಾಜ್ಯಮಟ್ಟದ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಮನಪಾ ಆಯುಕ್ತರಿಗೆ ಸೂಚಿಸಿದರು.
ಮನಪಾ ಮಂಗಳಾ ಸಭಾಂಗಣದಲ್ಲಿ ಇಂದು ನಡೆದ ಪಾಲಿಕೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 24×7 ಕುಡಿಯುವ ನೀರು ಪೂರೈಕೆ, ಗೇಲ್ ಇಂಡಿಯಾದ ಪೈಪ್‍ಲೈನ್ ಅಳವಡಿಕೆ, ಯುಜಿಡಿ ಹಾಗೂ ಮೆಸ್ಕಾಂನಿಂದ ಯುಜಿ ಕೇಬಲ್ ಅಳವಡಿಕೆ ಕಾಮಗಾರಿಗಳನ್ನು ನಿರ್ವಹಿಸಲಾಗುತ್ತಿದೆ. ಅದಕ್ಕಾಗಿ ಹೆಚ್ಚಿನ ಅನುದಾನ ಬಿಡುಗಡೆಗೊಂಡಿದೆ. ಆದರೆ ಅದರ ಕಾಮಗಾರಿಗಳನ್ನು ನಿರ್ವಹಿಸುವ ಸಂದರ್ಭ ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆಯನ್ನು ವಹಿಸಬೇಕು ಎಂದು ಹೇಳಿದರು.
ಈ ಎಲ್ಲಾ ಕಾಮಗಾರಿಗಳ ನಿರ್ವಹಣೆಯಲ್ಲಿ ಸೂಕ್ತ ಮೇಲು ಉಸ್ತುವಾರಿ ಆಗಬೇಕು. ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ ಕೈಗೊಳ್ಳಲಾಗಿರುವ 19 ಕಾಮಗಾರಿಗಳು ಗೇಲ್ ಕಾಮಗಾರಿಗಳೊಂದಿಗೆ ತಾಳೆಯಾಗಬೇಕು. ಈ ನಿಟ್ಟಿನಲ್ಲಿ ಇಂಜಿನಿಯರ್ ಮೇಲುಸ್ತುವಾರಿ ಮಾಡಬೇಕು. ನಗರದಲ್ಲಿ ಸ್ವಚ್ಛತೆಗೆ ಹೆಚ್ಚಿನ ಗಮನ ಹರಿಸಬೇಕು. ಮಳೆಗಾಲದಲ್ಲಿ ರಸ್ತೆಯ ಮೇಲೆ ನೀರು ಹರಿದು ಸಂಚಾರಕ್ಕೆ ತೊಂದರೆಯಾಗಬಾರದು. ಸುಗಮ ಸಂಚಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಕಂದಾಯ ವಸೂಲಾತಿಗೆ ಪಾಲಿಕೆಯಿಂದ ಮತ್ತಷ್ಟು ಹೆಚ್ಚು ಗಮನ ಹರಿಸಬೇಕು ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.
Kshetra Samachara
13/06/2022 10:54 pm