ಕಾಪು: ಮಾಜಿ ಸಿಎಂ ವೀರಪ್ಪ ಮೊಯ್ಲಿ ಕಾಪು ತಾಲೂಕಿನ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಹಾನಿ ಪರಿಶೀಲಿಸಿದ ಬಳಿಕ ರಾಜೀವ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಈ ಸಂದರ್ಭ ಪತ್ರಕರ್ತರು, ಮುಖ್ಯಮಂತ್ರಿ ಅಭ್ಯರ್ಥಿ ಕುರಿತಾಗಿ ನಡೆಯುತ್ತಿರುವ ಚರ್ಚೆ ಬಗ್ಗೆ ಕೇಳಿದಾಗ "ಮುಖ್ಯಮಂತ್ರಿ ಅಭ್ಯರ್ಥಿ ವಿಚಾರದಲ್ಲಿ ಶಾಸಕ ಜಮೀರ್ ಅಹಮ್ಮದ್ ಅವರದ್ದು ಅಧಿಕ ಪ್ರಸಂಗಿತನದ ಮಾತಾಗಿದೆ. ಮುಖ್ಯಮಂತ್ರಿ ಅಭ್ಯರ್ಥಿಯನ್ನು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ನಿರ್ಧರಿಸಲಾಗುತ್ತದೆ. ಅದರ ಬಗ್ಗೆ ಈಗ ಚರ್ಚೆ ನಡೆಸುವುದು ಅಪ್ರಸ್ತುತವಾಗುತ್ತದೆ.
ನಮ್ಮಲ್ಲಿ ಪಕ್ಷ ಮೊದಲು, ಅಭ್ಯರ್ಥಿ ನಂತರ ಎಂಬ ಸಿದ್ಧಾಂತವಿದ್ದು, ಅದೇ ರೀತಿಯಲ್ಲಿ ನಾವು ಬೆಳೆದು ಬಂದಿದ್ದೇವೆ. ಮುಖ್ಯಮಂತ್ರಿ ಅಭ್ಯರ್ಥಿ ವಿಚಾರದಲ್ಲಿ ಗೊಂದಲ ಸೃಷ್ಟಿಸುವವರು, ಲಾಬಿ ನಡೆಸುತ್ತಿರುವವರು, ಲಾಬಿಗೆ ಪ್ರೇರಣೆ ನೀಡುವವರ ವಿರುದ್ಧ ಪಕ್ಷ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂದರು.
ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಹುಟ್ಟುಹಬ್ಬದಂದು ಸಿದ್ಧರಾಮೋತ್ಸವ ನಡೆಯುತ್ತಿಲ್ಲ. ಸಿದ್ಧರಾಮಯ್ಯ ಕಾಂಗ್ರೆಸ್ ಪಕ್ಷದ ಅವಿಭಾಜ್ಯ ಅಂಗವಾಗಿದ್ದು, ಅವರ ನೇತೃತ್ವದಲ್ಲಿ ಕಾಂಗ್ರೆಸ್‌ನ ಶಕ್ತಿ ಪ್ರದರ್ಶನ ನಡೆಯಲಿದೆ. ಕಾಂಗ್ರೆಸ್ ಪಕ್ಷ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ, ಜನಸಂಪರ್ಕ ಶಿಬಿರ, ಸಂಘಟನೆ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಅದರಂತೆ ಇದು ಕೂಡಾ ಅದರ ಭಾಗವಾಗಿದೆ ಎಂದರು.
ಮಾಜಿ ಸಚಿವ ವಿನಯಕುಮಾರ್ ಸೊರಕೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಕಾರ್ಯದರ್ಶಿ ಎಂ.ಎ. ಗಫೂರ್, ಕೆಪಿಸಿಸಿ ಕೋ-ಆರ್ಡಿನೇಟರ್ ನವೀನ್‌ಚಂದ್ರ ಜೆ. ಶೆಟ್ಟಿ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಮಹಿಳಾ ಕಾಂಗ್ರೆಸ್ ಮುಖಂಡರಾದ ಶಾಂತಾಲತಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Kshetra Samachara
25/07/2022 12:59 pm