ಮುಲ್ಕಿ: ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ "ಹರ್ ಘರ್ ತಿರಂಗಾ" ಅಭಿಯಾನ ಅಂಗವಾಗಿ ನಗರ ಪಂಚಾಯತಿ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಗಳು ಪ್ರತಿನಿಧಿಗಳೊಂದಿಗೆ ನ.ಪಂ. ಸಭಾ ಭವನದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಮುಲ್ಕಿ ನಪಂ ಅಧ್ಯಕ್ಷ ಸುಭಾಶ್ ಶೆಟ್ಟಿ ವಹಿಸಿದ್ದರು.ಸಭೆಯಲ್ಲಿ ಮುಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿ ಚಂದ್ರ ಪೂಜಾರಿ ಮಾತನಾಡಿ 75 ವರ್ಷದ ಸ್ವಾತಂತ್ರ್ಯ ದಿನದ ಅಂಗವಾಗಿ ಜಿಲ್ಲಾಡಳಿತದ ಸ್ಪಷ್ಟ ಸೂಚನೆಯಂತೆ ಆ. 13 ರಿಂದ 15 ರವರೆಗೆ ಪ್ರತಿ ಮನೆಯಲ್ಲಿ ಸ್ವಾತಂತ್ರ್ಯದ ತ್ರಿವರ್ಣ ಧ್ವಜ ಹಾರಿಸಲು ಪ್ರೇರೇಪಿಸಬೇಕು.ಯಾವುದೇ ಮನೆಯಲ್ಲಿ ಸಂಘ ಸಂಸ್ಥೆಯಲ್ಲಿ ಧ್ವಜ ಹಾರಿಸುವಾಗ ಎಚ್ಚರಿಕೆಯಿಂದ ಇದ್ದು ಧ್ವಜಕ್ಕೆ ಅವಮಾನವಾಗದಂತೆ ನೋಡಿಕೊಳ್ಳಬೇಕು ಹಾಗೂ ಏಕ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಶಾಲೆಯಲ್ಲಿ ಮಕ್ಕಳಿಗೆ ಮನವರಿಕೆ ಮಾಡಬೇಕು ಎಂದರು.
ಸ್ವಾತಂತ್ರ್ಯೋತ್ಸವದ ದಿನದಂದು ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯ ಗಾಂಧಿ ಮೈದಾನದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ನೇತೃತ್ವದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಹಾಗೂ ವಿವಿಧ ಸವಲತ್ತುಗಳ ವಿತರಣೆ ನಡೆಯಲಿದೆ ಎಂದರು. ನ.ಪಂ ಸದಸ್ಯ ಯೋಗೀಶ್ ಕೋಟ್ಯಾನ್ ಮಾತನಾಡಿ ಸಭೆಗೆ ಮುಲ್ಕಿ ತಹಶೀಲ್ದಾರ್ ಕಚೇರಿಯ ಅಧಿಕಾರಿಗಳು ಗೈರಾಗಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಸಭೆಯಲ್ಲಿ ಮುಲ್ಕಿ ಸರಕಾರಿ ಕಾಲೇಜಿನ ಪ್ರಾಂಶುಪಾಲ ಡಾ. ವಾಸುದೇವ ಬೆಳ್ಳೆ ಮತ್ತಿತರರು ಮಾತನಾಡಿದರು. ಉಪಾಧ್ಯಕ್ಷ ಸತೀಶ್ ಅಂಚನ್, ಸ್ಥಾಯಿ ಸಮಿತಿ ಅಧ್ಯಕ್ಷೆ ಲಕ್ಷ್ಮಿ, ಆರೋಗ್ಯ ಅಧಿಕಾರಿ ಲಿಲ್ಲಿ ನಾಯರ್, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಮತ್ತಿತರರು ಉಪಸ್ಥಿತರಿದ್ದರು.
Kshetra Samachara
05/08/2022 02:15 pm