ಮಂಗಳೂರು: ಪುತ್ತೂರಿನ ರಾಕೇಶ್ ಕೃಷ್ಣಗೆ "ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ"; ನಾಳೆ ಪ್ರದಾನ
ಮಂಗಳೂರು: ಪ್ರತಿವರ್ಷ ಗಣರಾಜ್ಯೋತ್ಸವದ ಸಂದರ್ಭ ಕೇಂದ್ರ ಸರಕಾರ ನೀಡುವ ‘ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿ ಆಯ್ಕೆಯಾಗಿದ್ದಾರೆ.
ವಿಜ್ಞಾನ ಅನ್ವೇಷಣೆ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ರಾಕೇಶ್ ಕೃಷ್ಣ ಪ್ರಶಸ್ತಿಗೆ ಆಯ್ಕೆಯಾದ ಕನ್ನಡಿಗ.
ಅವರಿಗೆ ಆವಿಷ್ಕಾರ ವಿಭಾಗದಲ್ಲಿ ಪುರಸ್ಕಾರ ಲಭಿಸಿದೆ. ಕೇಂದ್ರ ಸರಕಾರ ಪ್ರತಿವರ್ಷ ಬಾಲ ಪ್ರತಿಭೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡುತ್ತಿದೆ. ಪ್ರಶಸ್ತಿಯು ಪದಕ ಸಹಿತ 1 ಲಕ್ಷ ರೂ. ನಗದು ಒಳಗೊಂಡಿದೆ.ವಿಜೇತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವೀಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.
ರಾಕೇಶ್ ಕೃಷ್ಣ ಬನ್ನೂರು ನಿವಾಸಿ ರವಿಶಂಕರ್ ನೆಕ್ಕಿಲ- ಡಾ.ದುರ್ಗಾರತ್ನಾ ದಂಪತಿ ಪುತ್ರ. ಇವರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ.
ಭಾರತ ಸರಕಾರದ ವಿಜ್ಞಾನ ತಂತ್ರಜ್ಞಾನ ಇಲಾಖೆ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಇನ್ ಸ್ಪೈರ್ ಅವಾರ್ಡ್ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಗಳಿಸಿದ್ದರು. ಅಲ್ಲದೆ, ಜಪಾನಿನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ವಿಜ್ಞಾನ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ.