ಉಡುಪಿ: ಕರ್ನಾಟಕ ರಾಜ್ಯದಲ್ಲಿ ಆರೋಗ್ಯ ಇಲಾಖೆಗೆ ಸಂಬಂಧಿಸಿದ ವಿವಿಧ ಇಲಾಖೆಯಲ್ಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಗುತ್ತಿಗೆ ಆಧಾರಿತ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವತ್ತಿಗೂ ಯಾವುದೇ ಹೆಚ್ಚುವರಿ ಸೌಲಭ್ಯಗಳಿಲ್ಲದೆ ಕನಿಷ್ಠ ಸೌಲಭ್ಯ ಹಾಗೂ ಕನಿಷ್ಠ ವೇತನದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಇವರಿಗೆ ನೌಕರಿ ಭದ್ರತೆ ಸೇರಿದಂತೆ ಇನ್ನಿತರ ಸೌಲಭ್ಯವನ್ನು ನೀಡಬೇಕು ಎಂಬ ಬೇಡಿಕೆ ಇಟ್ಟುಕೊಂಡು ಹಲವಾರು ಬಾರಿ ಹೋರಾಟವನ್ನು ನಡೆಸಿರುತ್ತಾರೆ. ಆದರೆ ಈ ಬಗ್ಗೆ ಯಾವುದೇ ಸಕಾರಾತ್ಮಕ ಫಲಿತಾಂಶ ಬಂದಿರುವುದಿಲ್ಲ.
ಗುತ್ತಿಗೆ ನೌಕರರ ದಶಕಗಳ ಬೇಡಿಕೆಯನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ, ಯುವಶಕ್ತಿ ಕರ್ನಾಟಕ, ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಯ ಪದಾಧಿಕಾರಿಗಳು ಸೇರಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸರಕಾರಿ ಭರವಸೆ ಸಮಿತಿಯ ಅಧ್ಯಕ್ಷರಾದ ಕೆ. ರಘುಪತಿ ಭಟ್ ರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಲಾಯಿತು. ಅಧ್ಯಕ್ಷರು ಈ ಬೇಡಿಕೆಯನ್ನು ಅತೀ ಶೀಘ್ರವಾಗಿ ಈಡೇರಿಸುವ ಭರವಸೆಯನ್ನು ನೀಡಿದ್ದು ವಿಷಯವನ್ನು ರಾಜ್ಯದ ಮುಖ್ಯಮಂತ್ರಿಗಳ ಗಮನಕ್ಕೂ ತಂದಿರುತ್ತಾರೆ.
ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರ ಬೇಡಿಕೆಯನ್ನು ಅತಿ ಶೀಘ್ರದಲ್ಲಿ ಈಡೇರಿಸಲು ಸರಕಾರ ವಿಫಲವಾದಲ್ಲಿ ಹೋರಾಟ ಸಮಿತಿ ರಚಿಸಿಕೊಂಡು ಹೋರಾಟ ನಡೆಸುವುದು ಅನಿವಾರ್ಯ ವಾಗಿರುತ್ತದೆ ಎಂದು ಯುವಶಕ್ತಿ ಕರ್ನಾಟಕ ರಾಜ್ಯ ಅಧ್ಯಕ್ಷರಾದ ಪ್ರಮೋದ್ ಉಚ್ಚಿಲ್, ಹಾಗೂ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಯ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರಾದ ಅನ್ಸಾರ್ ಅಹಮದ್ ರವರು ತಿಳಿಸಿರುತ್ತಾರೆ.
Kshetra Samachara
11/09/2021 12:27 pm