ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಶೋಷಿತರು, ದಲಿತರು ಹಾಗೂ ಬಡವರ ಕಲ್ಯಾಣದತ್ತ ಚಿತ್ತ ಹರಿಸಿ, ಪರಿಶಿಷ್ಟ ಜಾತಿ ಮೀಸಲಾತಿಯನ್ನು 15%ದಿಂದ 17%ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು 3%ದಿಂದ 7%ಕ್ಕೆ ಏರಿಸುವ ನಿಟ್ಟಿನಲ್ಲಿ ತೆಗೆದುಕೊಂಡ ಐತಿಹಾಸಿಕ ನಿರ್ಧಾರವನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸುತ್ತದೆ.
ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಸ್.ಸಿ. ಮತ್ತು ಎಸ್.ಟಿ. ಸಮುದಾಯದ ಮುಖಂಡರು ಅ.17ರಂದು ಬೃಹತ್ ಸಂಖ್ಯೆಯಲ್ಲಿ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅಭಿನಂದಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಪ್ರಮುಖರು ಹಾಗೂ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಮತ್ತು ಜಿಲ್ಲಾ ಎಸ್.ಟಿ. ಮೋರ್ಚಾ ಪದಾಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಎಸ್.ಸಿ. ಮತ್ತು ಎಸ್.ಟಿ. ಸಮುದಾಯಗಳ ಕಲ್ಯಾಣದ ವಿವಿಧ ಯೋಜನೆಗಳ ಅನುದಾನ ಮತ್ತು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿರುವ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅಭಿನಂದಿಸುವ ನೆಲೆಯಲ್ಲಿ ಅ.22ರಂದು ಉಡುಪಿಯಲ್ಲಿ ಜಿಲ್ಲಾ ಬಿಜೆಪಿ, ಜಿಲ್ಲಾ ಎಸ್.ಸಿ. ಮೋರ್ಚಾ ಮತ್ತು ಜಿಲ್ಲಾ ಎಸ್.ಟಿ. ಮೋರ್ಚಾ ನೇತೃತ್ವದಲ್ಲಿ 'ಬೃಹತ್ ಎಸ್.ಸಿ., ಎಸ್.ಟಿ. ಸಮುದಾಯಗಳ ಸಮಾವೇಶ' ನಡೆಯಲಿದೆ ಎಂದು ಅವರು ಹೇಳಿದರು.
Kshetra Samachara
13/10/2022 05:41 pm