ಕಾರವಾರ (ಉತ್ತರಕನ್ನಡ): ಕಳೆದ ಐದು ವರ್ಷಗಳ ಹಿಂದೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದೆನ್ನಲಾಗಿದ್ದ ಪರೇಶ್ ಮೇಸ್ತಾ ಸಾವಿನ ಪ್ರಕರಣದಲ್ಲಿ ಸಿಬಿಐ ಅಂತೂ 'ಬಿ' ರಿಪೋರ್ಟ್ ಸಲ್ಲಿಸಿದೆ.
2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಎಂಟರಂದು ಹೊನ್ನಾವರ ನಗರದ ಶನಿದೇವಾಸ್ಥಾನದ ಹಿಂಭಾಗದ ಶೆಟ್ಟಿ ಕೆರೆಯಲ್ಲಿ ಮೇಸ್ತಾ ಶವವಾಗಿ ಪತ್ತೆಯಾಗಿದ್ದ. ಯುವಕನನ್ನು ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿಗರು ಆರೋಪಿಸಿದ್ದರು. ಮೇಸ್ತಾನನ್ನು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಹಿಂದೂ ಕಾರ್ಯಕರ್ತ ಎಂದು ಬಿಂಬಿಸಿದ್ದರಿಂದ ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗಿತ್ತು.
ಪ್ರಕರಣವನ್ನ ಸಿಬಿಐಗೆ ವಹಿಸಬೇಕೆಂದು ಅಂದು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಒತ್ತಾಯಿಸಿದ್ದವು. ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಪ್ರಕರಣವನ್ನ ಸಿಬಿಐಗೆ ವಹಿಸಿತ್ತು. ಐವರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿತ್ತು. ವಿಸ್ತೃತ ನಾಲ್ಕೂವರೆ ವರ್ಷದ ನಂತರ ಸಿಬಿಐ ಹೊನ್ನಾವರ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ.
ಸಿಬಿಐ ಸಲ್ಲಿಸಿರುವ ವರದಿಯಲ್ಲಿ, ಪರೇಶ್ ಮೇಸ್ತಾ ಹತ್ಯೆ ನಡೆದಿಲ್ಲ. ಇದೊಂದು ಆಕಸ್ಮಿಕ ಸಾವು ಎಂದು ಅಭಿಪ್ರಾಯಿಸಲಾಗಿದೆ. ಇಂದು ಸಿಬಿಐ ಸಲ್ಲಿಸಿರುವ ಸಿಬಿಐ ವರದಿ ಪರಿಶೀಲಿಸಿದ ಹೊನ್ನಾವರ ನ್ಯಾಯಾಲಯ, ನವೆಂಬರ್ 16ಕ್ಕೆ ತೀರ್ಪು ಮುಂದೂಡಿಕೆ ಮಾಡಿದೆ. ಈ ಮೂಲಕ ಹತ್ಯೆ ಎಂದು ಬಿಂಬಿಸಿ ರಾಜಕೀಯ ಲಾಭ ಪಡೆದಿದ್ದ ಬಿಜೆಪಿಗೆ ಭಾರೀ ಮುಖಭಂಗವಾದಂತಾಗಿದೆ.
PublicNext
03/10/2022 10:36 pm