ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೋಟಿಸ್ ವಾಪಸ್ ಪಡೆಯಲು ಸೂಚಿಸಲಾಗಿದೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಆದರೆ ಮುಖ್ಯ ಕಾರ್ಯದರ್ಶಿ ಭೂಮಿ ವಶಪಡಿಸಿಕೊಳ್ಳಲು ಲಿಖಿತ ಸೂಚನೆ ನೀಡಿದ್ದಾರೆ. ಈ ಸತ್ಯ ಮರೆಮಾಚಲು ಮುಖ್ಯಮಂತ್ರಿ ಸುಳ್ಳು ಹೇಳಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆರ್ ಅಶೋಕ್,ವಕ್ಫ್ ಮಂಡಳಿ ಬಡವರ ಭೂಮಿ ಕಬಳಿಸುತ್ತಿರುವುದರಿಂದ ಎಲ್ಲರೂ ಭೀತಿಗೊಳಗಾಗಿದ್ದಾರೆ. ಟಿಪ್ಪು ಸುಲ್ತಾನ್ ಖಡ್ಗ ಬಳಸಿ ಅಮಾಯಕರನ್ನು ಮತಾಂತರ ಮಾಡಿದ್ದ. ಅದೇ ರೀತಿ ಈಗ ಕಾಂಗ್ರೆಸ್ ವಕ್ಫ್ ಬಳಸಿಕೊಂಡು ಜನರ ಭೂಮಿ ಕಬಳಿಸುತ್ತಿದೆ.
ಸರ್.ಎಂ.ವಿಶ್ವೇಶ್ವರಯ್ಯನವರು ಓದಿದ ಶಾಲೆಯನ್ನೂ ವಕ್ಫ್ ಆಸ್ತಿ ಎಂದು ಉಲ್ಲೇಖಿಸಲಾಗಿದೆ. 15 ದಿನಗಳಲ್ಲಿ ಎಲ್ಲ ಆಸ್ತಿಗಳನ್ನು ವಕ್ಫ್ ಮಂಡಳಿಗೆ ಬರೆಯಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಕಬಳಿಕೆ ಮಾಡಿದ ಭೂಮಿ ವಾಪಸ್ ಪಡೆಯಿರಿ ಎಂದು ಹೇಳಿದ್ದಾರೆಯೇ ಹೊರತು, ರೈತರ ಜಮೀನು ಪಡೆಯಲು ಹೇಳಿಲ್ಲ. ಆದರೆ ಮಂಡಳಿಯ ಸದಸ್ಯರು ವಿಧಾನಸೌಧ ನಮ್ಮದು ಎಂದು ಕೂಡ ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರವಿದ್ದಾಗ ಕೋಲಾರದಲ್ಲಿ ವಾಲ್ಮೀಕಿ ಭವನ ನಿರ್ಮಿಸಲಾಗಿತ್ತು. ಈಗ ಅದರ ಮೇಲೆ ಮಸೀದಿ ಕಟ್ಟಿಸಿ ಕಾಂಪೌಂಡ್ ನಿರ್ಮಿಸಲಾಗಿದೆ. ಇಂತಹ ಅಕ್ರಮದ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದೆ ಎಂದರು.
PublicNext
09/11/2024 05:59 pm