ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ವಿದ್ಯಾರ್ಥಿ ನಿಲಯಗಳಲ್ಲಿ ಹದಗೆಟ್ಟ ವ್ಯವಸ್ಥೆ - ಅಧಿಕಾರಿಗಳಿಗೆ ಚಾಟಿ ಬೀಸಿದ ಗೃಹಸಚಿವ ಡಾ.ಜಿ.ಪರಮೇಶ್ವರ್

ತುಮಕೂರು: ತುಮಕೂರು ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಡಿ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆ ತೀರಾ ಹದಗೆಟ್ಟ ಪರಿಸ್ಥಿತಿಯಲ್ಲಿದ್ದು, ಯಾರೂ ಹೇಳೋರು, ಕೇಳೋರಿಲ್ಲದಂತಾಗಿದೆ ಎಂದು ಅಧಿಕಾರಿಗಳ ವಿರುದ್ಧ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಇತ್ತೀಚೆಗಷ್ಟೇ ಕೊರಟಗೆರೆ ತಾಲೂಕು ಬಜ್ಜನಹಳ್ಳಿ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ಸಾವಿಗೀಡಾಗಿರುವುದು ಅಧಿಕಾರಿಗಳ ವೈಫಲ್ಯ ಎದ್ದು ಕಾಣುತ್ತಿದೆ. ಕಚೇರಿಯಲ್ಲಿ ಕುಳಿತು ಪತ್ರಗಳಿಗೆ ಸಹಿ ಹಾಕಲಷ್ಟೇ ತಮ್ಮ ಕರ್ತವ್ಯಗಳನ್ನು ಸೀಮಿತಗೊಳಿಸದೆ ಶಾಲಾ-ಕಾಲೇಜು, ಆಸ್ಪತ್ರೆ, ವಿದ್ಯಾರ್ಥಿ ನಿಲಯಗಳಿಗೆ ತಿಂಗಳಿಗೊಮ್ಮೆಯಾದರೂ ಭೇಟಿ ನೀಡಿ ಪರಿಶೀಲಿಸಬೇಕು. ಅವ್ಯವಸ್ಥೆಗಳು ಕಂಡು ಬಂದರೆ ಕೂಡಲೇ ಸರಿಪಡಿಸಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮಾತಿನ ಚಾಟಿ ಬೀಸಿದರು.

ವಿದ್ಯಾರ್ಥಿ ನಿಲಯಗಳಲ್ಲಿರುವ ಶೌಚಾಲಯಗಳಿಗೆ ಬಾಗಿಲುಗಳೇ ಇಲ್ಲ. ವಿದ್ಯಾರ್ಥಿನಿಯರು ವ್ಯಾಸಂಗ ಮಾಡುವ ಸ್ಥಳದಲ್ಲಿ ಇಂತಹ ಅವ್ಯವಸ್ಥೆಗಳನ್ನು ನಾನು ಸಹಿಸುವುದಿಲ್ಲ. ಕೂಡಲೇ ವಸತಿ ನಿಲಯಗಳಿಗೆ ಅಗತ್ಯ ಮೂಲ ಸೌಕರ್ಯಗಳ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಅಸಡ್ಡೆ ತೋರಿದ ಅಧಿಕಾರಿಗಳು ಅಮಾನತಿನ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಸಿಇಒ ಪ್ರಭು, ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ರಾಜಣ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಉಪ ವಿಭಾಗಾಧಿಕಾರಿಗಳಾದ ಗೋಟೂರು ಶಿವಪ್ಪ, ಸಪ್ತಶ್ರೀ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

12/11/2024 10:22 pm

Cinque Terre

1.86 K

Cinque Terre

0