ಬೆಂಗಳೂರು : ಸಿ.ಬಿ.ಐ ತನಿಖೆಗೆ ವಹಿಸಿದ 09 ಅಕ್ರಮ ಗಣಿಗಾರಿಕೆ ಪ್ರಕರಣಗಳಲ್ಲಿ 06 ಪ್ರಕರಣಗಳಲ್ಲಿ ತನ್ನಿಂದ ತನಿಖೆ ಸಾಧ್ಯವಿಲ್ಲವೆಂದು ಸಿ.ಬಿ.ಐ ತಿಳಿಸಿರುವ 06 ಪ್ರಕರಣಗಳನ್ನು ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ವಹಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಕಾನೂನು ಸಚಿವ ಎಚ್.ಕೆ ಪಾಟೀಲ್ ತಿಳಿಸಿದರು.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಹೆಚ್ ಕೆ ಪಾಟೀಲ್, ಗೋವಾದ ಮರ್ಮಗೋವಾ ಮತ್ತು ಪಣಜಿ, ತಮಿಳುನಾಡಿನ ಎನ್ನೋರ್ ಮತ್ತು ಚೆನ್ನೈ, ಕರ್ನಾಟಕದ ನವ ಮಂಗಳೂರು ಮತ್ತು ಕಾರವಾರ ಬಂದರುಗಳಲ್ಲಿ ಹಾಗೂ ಆಂಧ್ರ ಪ್ರದೇಶದ ಕೃಷ್ಣ ಪಟ್ಟಣಂ, ಕಾಕಿನಾಡ ಮತ್ತು ವಿಶಾಖಪಟ್ಟಣಂ ಬಂದರುಗಳಲ್ಲಿ ಅಕ್ರಮ ಅದಿರು ಸಾಗಾಣಿಕೆ ಪ್ರಕರಣಗಳನ್ನು ಸಿ.ಬಿ.ಐ ವಾಪಸ್ಸು ಕಳುಹಿಸಿರುವ ಹಿನ್ನೆಲೆಯಲ್ಲಿ ಆ ಪ್ರಕರಣಗಳ ಬಗ್ಗೆ ವಿಶೇಷ ತನಿಖಾ ತಂಡದಿಂದ ತನಿಖೆ ಮಾಡಿಸಲು ನಿರ್ಣಯಿಸಲಾಗಿದೆ.
ಅಕ್ರಮ ಗಣಿಗಾರಿಕೆ ಎಲ್ಲಾ ಪ್ರಕರಣಗಳನ್ನು ಸೂಕ್ತವಾದ ತನಿಖೆಗೆ ಒಳಪಡಿಸುವುದು ಅಗತ್ಯವಾಗಿದೆ. ಆದ್ದರಿಂದ ಮುಂದಿನ ಸಚಿವ ಸಂಪುಟ ಸಭೆಗೆ ಈ ಪ್ರಕರಣಗಳ ತನಿಖೆ ಕುರಿತ ವಿವರಗಳನ್ನು ಮಂಡಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಿದ್ದಾರೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ, ನಿರ್ಣಯಿಸಲಾಗುವುದು ಎಂದು ಸಚಿವರು ವಿವರಿಸಿದರು.
ಇದರ ಜೊತೆಗೆ ಸರ್ಕಾರದ ಬೊಕ್ಕಸಕ್ಕೆ ನಷ್ಟವುಂಟು ಮಾಡಿದ ಹತ್ತು ಕಂಪನಿಗಳಿಗೆ ಸಿ ಪ್ರವರ್ಗ ಗಣಿ ಗುತ್ತಿಗೆ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಲೋಕಾಯುಕ್ತ ಎಸ್ ಐ ಟಿ ಗೆ ವಹಿಸಲು ಸಂಪುಟ ನಿರ್ಧಾರ ಮಾಡಿದೆ. ಮೈಸೂರು ಮ್ಯಾಂಗನೀಸ್ ಕಂಪನಿ, ಎಂ.ದಶರಥ ರಾಮರೆಡ್ಡಿ ಕಂಪನಿ, ಅಲ್ಲಂ ವೀರಭದ್ರಪ್ಪ ಗಣಿ ಕಂಪನಿ, ಕರ್ನಾಟಕ ಲಿಂಪೋ ಗಣಿ ಕಂಪನಿ, ಅಂಜನಾ ಮಿನರಲ್ಸ್, ರಝಯ್ಯಾ ಖಾನಂ ಗಣಿ, ಮಿಲನಾ ಮಿನರಲ್ಸ್, ಎಂ.ಶ್ರೀನಿವಾಸುಲು ಕಂಪನಿ, ಜಿ.ರಾಜಶೇಖರ್ ಕಂಪನಿ, ಚನ್ನಕೇಶವ ರೆಡ್ಡಿ ಲಕ್ಷ್ಮೀ ನರಸಿಂಹ ಮೈನಿಂಗ್ ಕಂಪನಿ ವಿರುದ್ಧ ತನಿಖೆಗೆ ನಿರ್ಧರಿಸಲಾಗಿದೆ.
PublicNext
14/11/2024 09:59 pm