ನ್ಯೂಯಾರ್ಕ್: ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದಂತೆ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಭಾರತದ ಉದ್ಯಮಿ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ಅವರ ವಿರುದ್ಧ ಅಮೆರಿಕದ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ ವರದಿಯಾಗಿದೆ.
₹2,237 ಕೋಟಿ ಲಂಚದ ಆರೋಪದಲ್ಲಿ ಗೌತಮ್ ಅದಾನಿ, ಸಾಗರ್ ಆರ್. ಅದಾನಿ ಹಾಗೂ ವಿನೀತ್ ಎಸ್. ಜೈನ್ ವಿರುದ್ಧ ಐದು ಅಂಶಗಳ ಕ್ರಿಮಿನಲ್ ಆರೋಪಪಟ್ಟಿಯನ್ನು ನ್ಯೂಯಾರ್ಕ್‌ನ ಪೂರ್ವ ಜಿಲ್ಲಾ ನ್ಯಾಯಾಲಯಕ್ಕೆ ಅಮೆರಿಕದ ಪ್ರಾಸಿಕ್ಯೂಟರ್ ಸಲ್ಲಿಸಿದ್ದರು.
ಭಾರತದಲ್ಲಿ ಬೃಹತ್ ಸೌರ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪನೆಗಾಗಿ ಮುಂದಿನ 20 ವರ್ಷಗಳಲ್ಲಿ 2 ಶತಕೋಟಿ ಅಮೆರಿಕನ್ ಡಾಲರ್ ಹೂಡಿಕೆ ಆಕರ್ಷಿಸಲು ಭಾರತದ ಸರ್ಕಾರಿ ಅಧಿಕಾರಿಗಳಿಗೆ ಲಂಚ ನೀಡಿದ ಹಾಗೂ ಅಮೆರಿಕ ಒಳಗೊಂಡಂತೆ ವಿದೇಶಿ ಹೂಡಿಕೆದಾರರಿಗೆ ತಪ್ಪು ಮಾಹಿತಿ ನೀಡಿದ ಆರೋಪವಿದೆ.
ನ್ಯಾಯಾಲಯದ ಆದೇಶದ ಬೆನ್ನಲ್ಲೇ ₹5 ಸಾವಿರ ಕೋಟಿ ಸಂಗ್ರಹಿಸುವ ಬಾಂಡ್ ಬಿಡುಗಡೆ ಮಾಡುವ ಪ್ರಸ್ತಾವನೆಯಿಂದ ಅದಾನಿ ಗ್ರೀನ್ ಕಂಪನಿ ಹಿಂದೆ ಸರಿದಿದೆ ಎಂದು ವರದಿಯಾಗಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಯಾರ್ಕ್ ಸ್ಟಾಕ್ ಎಕ್ಸ್‌ಚೇಂಜ್‌ನಲ್ಲಿ ವ್ಯವಹಾರ ನಡೆಸಿದ್ದ ಕಂಪನಿಯ ಮಾಜಿ ಅಧಿಕಾರಿಗಳಾದ ರಂಜಿತ್ ಗುಪ್ತಾ ಹಾಗೂ ರೂಪೇಶ್ ಅಗರವಾಲ್ ಹಾಗೂ ಕೆನಡಾ ಮೂಲದ ಹೂಡಿಕೆದಾರರಾದ ದೀಪಕ್ ಮಲ್ಹೋತ್ರಾ ಮತ್ತು ಸೌರಬ್ ಅಗರವಾಲ್ ಅವರು ಲಂಚ ನೀಡಿರುವುದು ವಿದೇಶಿ ಭ್ರಷ್ಟ ಕಾರ್ಯಾಚರಣೆ ಕಾಯ್ದೆಯಡಿ ಅಪರಾಧವಾಗಿದೆ ಎಂದು ದೋಷಾರೋಪ ಪಟ್ಟಿಯಲ್ಲಿ ಹೇಳಲಾಗಿದೆ.
PublicNext
21/11/2024 01:09 pm