ಧಾರವಾಡ: ತಮಿಳುನಾಡಿನ ಹೊಸೂರು ಕೋರ್ಟ್ ಆವರಣದಲ್ಲೇ ವಕೀಲರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವುದನ್ನು ಖಂಡಿಸಿ ಧಾರವಾಡ ವಕೀಲರ ಸಂಘದ ಸದಸ್ಯರೂ ಕೂಡ ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಧಾರವಾಡದ ಜಿಲ್ಲಾ ನ್ಯಾಯಾಲಯದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ರ್‍ಯಾಲಿ ನಡೆಸಿದ ವಕೀಲರು, ಜ್ಯುಬಿಲಿ ವೃತ್ತವನ್ನು ಕೆಲ ಕಾಲ ಬಂದ್ ಮಾಡಿ ಪ್ರತಿಭಟಿಸಿದರು. ನಂತರ ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ಬಂದು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಮನವಿ ಸ್ವೀಕರಿಸಲು ಬರದೇ ಇದ್ದಿದ್ದಕ್ಕೆ ವಕೀಲರು ಜಿಲ್ಲಾಧಿಕಾರಿಗಳ ವಿರುದ್ಧವೇ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿಗಳು ವಕೀಲರ ಮನವಿ ಪಡೆದರು.
ದೇಶದಾದ್ಯಂತ ವಕೀಲರ ಮೇಲೆ ಆಗಾಗ ಹಲ್ಲೆಗಳು ನಡೆಯುತ್ತಲೇ ಇವೆ. ವಕೀಲರಿಗೆ ಸೂಕ್ತ ಭದ್ರತೆ ನೀಡಬೇಕು. ವಕೀಲರ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಕೀಲರು ಆಗ್ರಹಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
21/11/2024 02:06 pm