ನವದೆಹಲಿ: ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದ ವತಿಯಿಂದ ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ ಮಾಡಿ ಮಾತನಾಡಿದ ಸಿಎಂ, ದೆಹಲಿ ನಗರದಲ್ಲಿ ಕೆ.ಎಂ.ಎಫ್. ಮತ್ತು ಮಂಡ್ಯ ಹಾಲು ಒಕ್ಕೂಟ ಸೇರಿ ವಿವಿಧ ಶ್ರೇಣಿಯ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ಇಡೀ ದೇಶದಲ್ಲಿ ರೈತರ ಉಪಕಸುಬು ಪಶುಸಂಗೋಪನೆ.
ಗುಜರಾತ್ ನಲ್ಲಿ ಕುರಿಯನ್ ಅವರು ಹಾಲು ಉತ್ಪಾದಕರ ಸಂಘವನ್ನು ಪ್ರಾರಂಭ ಮಾಡಿದರು. ಹಿಂದೆ ಪಶುಸಂಗೋಪನಾ ಸಚಿವನಾಗಿದ್ದು, ಒಂದು ವರ್ಷ ಕಾಲ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷನೂ ಆಗಿದ್ದೆ ಎಂದು ಸ್ಮರಿಸಿದ ಮುಖ್ಯಮಂತ್ರಿಗಳು, ಪಶುಸಂಗೋಪನಾ ಸಚಿವನಾಗಿದ್ದಾಗಲೇ ಹಾಲು ಉತ್ಪಾದಕರಿಗೆ ಶೋಷಣೆಯಾಗುತ್ತಿದ್ದುದ್ದನ್ನು ಮನಗಂಡು ಶಾಶ್ವತ ಮಾರುಕಟ್ಟೆ ಕಲ್ಪಿಸಲು ಹಾಲು ಉತ್ಪಾದಕರ ಸಂಘಗಳನ್ನು ರಚಿಸಲಾಯಿತು ಎಂದರು.
ರಾಜ್ಯದಲ್ಲಿ ಪ್ರತಿದಿನ 92 ರಿಂದ 93 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ರೈತರಿಂದ ಲೀಟರ್ ಗೆ 32 ರೂ.ಗಳಿಗೆ ಹಾಲು ಖರೀದಿಸಲಾಗುತ್ತಿದ್ದು, ರಾಜ್ಯ ಸರ್ಕಾರ ಕ್ಷೀರಧಾರೆ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 5 ರೂ. ಪ್ರೋತ್ಸಾಹಧನವನ್ನು ನೀಡುತ್ತಿದೆ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲದಲ್ಲಿ 2 ರೂ. ಇದ್ದ ಪ್ರೋತ್ಸಾಹಧನ, ನಂತರ 3 ರೂ. ಆಯಿತು. ನಾನು ಮುಖ್ಯಮಂತ್ರಿಯಾದ ನಂತರ ಇದನ್ನು 5 ರೂ.ಗಳಿಗೆ ಹೆಚ್ಚಿಸಲು ಘೋಷಣೆ ಮಾಡಲಾಯಿತು. ಪ್ರೋತ್ಸಾಹಧನಕ್ಕಾಗಿ ಪ್ರತಿ ದಿನ 5 ಕೋಟಿ ರೂ.ಗಳನ್ನು ಸರ್ಕಾರ ವೆಚ್ಚ ಮಾಡುತ್ತಿದೆ ಎಂದರು.
PublicNext
21/11/2024 06:40 pm