ಬೆಂಗಳೂರು : ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದತಿ ವಿಚಾರದಲ್ಲಿ ಎದ್ದಿರುವ ಗೊಂದಲದ ಕುರಿತು ಇಂದು ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಖುದ್ದು ತೆರಳಿ ರೇಷನ್ ಕಾರ್ಡ್ ರದ್ದುಗೊಂಡ ಕುಟುಂಬದವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯನವರಿಗೆ ಮುಡಾ ಕೇಸ್ ದಾಖಲಾದ ನಂತರ ಅವರು ಯಾಕೋ ಮಾನಸಿಕ ಸ್ಥಿಮಿತ ಕಳೆದುಕೊಂಡುಬಿಟ್ಟಿದ್ದಾರೆ ಎಂದರು. ಸದನ ಆರಂಭವಾಗುವ ಮುನ್ನವೇ ರಾಜ್ಯ ಸರ್ಕಾರ ಜನರಿಗೆ ರೇಷನ್ ಕಾರ್ಡ್ ವಾಪಸ್ ನೀಡಬೇಕು. ಇಲ್ಲವಾದರೆ ತೀವ್ರವಾದ ಹೋರಾಟ ಮಾಡಿ ಸರ್ಕಾರಿ ಕಚೇರಿಗಳಿಗೆ ಹಾಗೂ ವಿಧಾನಸೌಧಕ್ಕೆ ಬೀಗ ಹಾಕುತ್ತೇವೆ ಎಂದು ಎಚ್ಚರಿಸಿದರು.
ಅರಸು ಕಾಲೋನಿಯಲ್ಲಿ 45 ವರ್ಷದಿಂದ ರೇಷನ್ ಕಾರ್ಡ್ ಹೊಂದಿದ್ದ ವೃದ್ಧೆ, ಈಗ ಅರ್ಹತೆ ಕಳೆದುಕೊಂಡಿದ್ದಾರೆ. ಅಂಕಿ ಅಂಶದ ಪ್ರಕಾರ, 250 ಸರ್ಕಾರಿ ನೌಕರರ ಬಳಿ ರೇಷನ್ ಕಾರ್ಡ್ ಇದ್ದರೂ, 12 ಲಕ್ಷ ಜನರ ಕಾರ್ಡ್ ರದ್ದು ಮಾಡಲು ಸರ್ಕಾರ ಮುಂದಾಗಿದೆ. ಏನೂ ಭಯ ಬೇಡವೆಂದು ಸಿಎಂ ಸಿದ್ದರಾಮಯ್ಯ ಹೇಳಿದರೆ, ಆಹಾರ ಸಚಿವರು ಮತ್ತೆ ಅರ್ಜಿ ಹಾಕಿ ಎಂದು ಹೇಳುತ್ತಾರೆ. ಕಾಂಗ್ರೆಸ್ ನಾಯಕರು ತಪ್ಪು ಮಾಡಿದ ಮೇಲೆ ಜನರು ಯಾಕೆ ಮರಳಿ ಅರ್ಜಿ ಹಾಕಬೇಕು? ಎಂದು ಪ್ರಶ್ನೆ ಮಾಡಿದರು.
ಮರಳಿ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿದರೆ ಒಂದು ಕಾರ್ಡ್‌ಗೆ 10-15 ಸಾವಿರ ರೂ. ಲಂಚ ನೀಡಬೇಕಾಗುತ್ತದೆ. ಯಾರೂ ಅರ್ಜಿ ಹಾಕಬಾರದು, ಸರ್ಕಾರವೇ ಮರಳಿ ರೇಷನ್ ಕಾರ್ಡ್ ಕೊಡಬೇಕು. ದೇವಸ್ಥಾನದ ಮುಂದೆ ಹೂ ಮಾರುವವರು, ಸೊಪ್ಪು ಮಾರುವವರ ರೇಷನ್ ಕಾರ್ಡ್ ರದ್ದುಪಡಿಸಲಾಗಿದೆ. ಇದರ ವಿರುದ್ಧ ಸದನದಲ್ಲಿ ಹಾಗೂ ಹೊರಗೆ ಪ್ರತಿಭಟಿಸಲಾಗುವುದು ಎಂದು ತಿಳಿಸಿದರು.
PublicNext
21/11/2024 07:39 pm