ಕಾರವಾರ: ಕಾರವಾರದಿಂದ ಹಬ್ಬುವಾಡ ಮಾರ್ಗವಾಗಿ ರೈಲ್ವೆ ನಿಲ್ದಾಣ ಸಂಪರ್ಕಿಸುವ ರಸ್ತೆಯ ದುರಸ್ತಿ ಕಾರ್ಯವನ್ನು ಶೀಘ್ರವೇ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಗುರುವಾರ ಆಟೋ ಚಾಲಕರು ದಿಢೀರ್ ಪ್ರತಿಭಟನೆ ನಡೆಸಿದರು.
ಕಳೆದ ಮೂರ್ನಾಲ್ಕು ತಿಂಗಳಿನಿಂದ ರಸ್ತೆ ದುರಸ್ತಿಗೆ ಸಂಬಂಧಿಸಿದಂತೆ ಹಲವು ಬಾರಿ ಮನವಿ ಮಾಡಿದ್ದೇವೆ. ಜಿಲ್ಲಾಧಿಕಾರಿ ಕಚೇರಿ, ನಗರಸಭೆ, ತಾಲೂಕು ಪಂಚಾಯಿತಿ, ಪಿಡಬ್ಲೂಡಿ ಇಲಾಖೆ ಹಾಗೂ ಶಾಸಕರ ಗಮನಕ್ಕೂ ತಂದಿದ್ದೇವೆ. ಆದರೆ, ಈವರೆಗೂ ರಸ್ತೆಯ ಬಗ್ಗೆ ಯಾರೂ ಗಮನ ಹರಿಸಿಲ್ಲ. ಈ ಹಿಂದೆ ರಸ್ತೆ ತಡೆದು ಗಿಡ ನೆಟ್ಟು ಪ್ರತಿಭಟನೆ ಮಾಡಿದರೂ ದುರಸ್ತಿ ಕಾರ್ಯಕ್ಕೆ ಸ್ಥಳೀಯಾಡಳಿತ ಮುಂದಾಗಿಲ್ಲ.
ದಿನೇ ದಿನೆ ಹೊಂಡಗಳು ಹೆಚ್ಚಾಗುತ್ತಿವೆ. ನಗರದಿಂದ ರೈಲ್ವೇ ನಿಲ್ದಾಣಕ್ಕೆ ಓಡಾಡುವ ಆಟೋ ಚಾಲಕರು ವಾರಕ್ಕೊಮ್ಮೆ ಗ್ಯಾರೇಜಿಗೆ ಹೋಗುವ ಪರಿಸ್ಥಿತಿ ಇದೆ ಎಂದು ಆಕ್ರೋಶ ಹೊರಹಾಕಿದರು. ಶೀಘ್ರವೇ ರಸ್ತೆ ದುರಸ್ತಿಗೆ ಸ್ಥಳೀಯ ಆಡಳಿತ ಮುಂದಾಗದಿದ್ದರೆ ರಸ್ತೆ ತಡೆದು ಉಗ್ರ ಪ್ರತಿಭಟನೆ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
Kshetra Samachara
28/11/2024 10:08 pm