ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು ಒಂದು ಗಂಟೆ ಕಾಲ "ಮೇಷ್ಟ್ರು" ಆಗಿ ಕಾರ್ಯ ನಿರ್ವಹಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಂವಿಧಾನ ಓದು ಅಭಿಯಾನದ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ವಿಧ್ಯಾರ್ಥಿಗಳಿಗೆ ಸಿಎಂ ಪಾಠ ಮಾಡುವ ಮೂಲಕ ಗಮನ ಸೆಳೆದರು. ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿಗಳು ಸಂವಿಧಾನದ ಬಗ್ಗೆ ಪಾಠ ಮಾಡಿದರು.
ಸಂವಿಧಾನದ ಶ್ರೇಷ್ಠತೆ ಮತ್ತು ವಿಫಲತೆ ಅದು ಯಾರ ಕೈಯಲ್ಲಿದೆ ಎನ್ನುವವರ ಆಧಾರದ ಮೇಲೆ ನಿರ್ಧಾರವಾಗುತ್ತದೆ ಎನ್ನುವ ಅಂಬೇಡ್ಕರ್ ಅವರ ಮಾತನ್ನು ಮತ್ತು ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಕುವೆಂಪು ಅವರ ಮಾತುಗಳನ್ನು ಉಲ್ಲೇಖಿಸಿ ಪಾಠ ಸಿಎಂ ಮಾಡಿದರು. ಸಂವಿಧಾನದ ಬಗ್ಗೆ ಗೌರವ ಇಲ್ಲದವರ ಕೈಗೆ ಹೋದರೆ, ಎಷ್ಟೇ ಒಳ್ಳೆ ಸಂವಿಧಾನ ಆದರೂ ಪರಿಣಾಮ ಕೆಟ್ಟದಾಗಿರುತ್ತದೆ ಎಂದರು. ಸಂವಿಧಾನದ ಪೀಠಿಕೆಯಲ್ಲೇ ಇಡೀ ಸಂವಿಧಾನದ ಸಾರಾಂಶ ಇದೆ. ಜಾತ್ಯಾತೀತತೆ, ಸಾಮಾಜಿಕ ನ್ಯಾಯ ಎರಡೂ ಮೂಲ ಸಂವಿಧಾನದಲ್ಲಿ ಇರಲಿಲ್ಲ. ಬಳಿಕ ಸೇರ್ಪಡೆಯಾಯಿತು. ಇದನ್ನು ತೆಗೆಯಬೇಕು ಎಂದು ಕೆಲವರು ಸುಪ್ರೀಂಕೋರ್ಟ್ ಗೆ ಹೋಗಿದ್ದರು. ಆದರೆ ಸುಪ್ರೀಂಕೋರ್ಟ್ ಜಾತ್ಯಾತೀತತೆ ಮತ್ತು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯಿತು ಎಂದರು.
ಮುಖ್ಯಮಂತ್ರಿಗಳ ಪಾಠವನ್ನು ತದೇಕಚಿತ್ತದಿಂದ ಆಲಿಸಿದ ವಿದ್ಯಾರ್ಥಿಗಳು, ಹಲವಾರು ಪ್ರಶ್ನೆಗಳ ಮೂಲಕ ಸಂವಿಧಾನದ ಬಗ್ಗೆ ಇನ್ನಷ್ಟು ತಿಳಿದುಕೊಂಡರು.
PublicNext
03/12/2024 03:24 pm