ಕೊಡಗು: ನಿವೃತ್ತ ಪೊಲೀಸ್ ಅಧಿಕಾರಿಗಳ ಶ್ರೇಯೋಭಿವೃದ್ಧಿಗೆ ಕಳೆದ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ‘ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಬೆಳ್ಳಿ ಮಹೋತ್ಸವ ಡಿ.10 ರಂದು ನಗರದ ಮೈತ್ರಿ ಸಭಾಂಗಣದಲ್ಲಿ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಂಘದ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಗೌರವಾಧ್ಯಕ್ಷರಾದ ಮುಕ್ಕಾಟಿರ ಎ.ಅಪ್ಪಯ್ಯ, ಅಂದು ಬೆಳಗ್ಗೆ 10 ಗಂಟೆಗೆ ಜಿಲ್ಲೆಯವರೇ ಆದ ಲೆಫ್ಟಿನೆಂಟ್ ಜನರಲ್(ನಿವೃತ್ತ) ಡಾ.ಪ್ರೊ.ಬಿ.ಎನ್.ಬಿ.ಮಹಾವೀರ ಪ್ರಸಾದ್ ಎಸ್‌ಎಂ, ವಿಎಸ್‌ಎಂ ಅವರ ಅಧ್ಯಕ್ಷತೆಯಲ್ಲಿ ಸಮಾರಂಭ ನಡೆಯಲಿದೆಯೆಂದು ತಿಳಿಸಿದರು.
ಜಿಲ್ಲೆಯ ಎಸ್‌ಪಿಯಾಗಿ ಕಾರ್ಯನಿರ್ವಹಿಸಿ, ಮೈತ್ರಿ ಸಭಾಂಗಣದ ನಿರ್ಮಾಣಕ್ಕೆ ಕಾರಣಕರ್ತರಾದ ನಿವೃತ್ತ ಎಡಿಜಿಪಿ ಭಾಸ್ಕರ್ ರಾವ್‌ರವರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಿವೃತ್ತ ಜಾಯಿಂಟ್ ಕಂಟ್ರೋಲರ್ ಫೈನಾನ್ಸ್ ಬಿ.ಜಿ. ಮಾದಪ್ಪ, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ.ರಾಮರಾಜನ್ ಪಾಲ್ಗೊಳ್ಳಲಿದ್ದಾರೆ.
ಸನ್ಮಾನ- ಸಮಾರಂಭದಲ್ಲಿ ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಹಿಂದಿನ ಎಲ್ಲಾ ಅಧ್ಯಕ್ಷರು, ಕಾರ್ಯದರ್ಶಿಗಳನ್ನು, ಸಂಘಕ್ಕೆ ಆರ್ಥಿಕ ನೆರವನ್ನಿತ್ತವರನ್ನು, ಬರಹಗಾರರು ಮತ್ತು ಬರಹಗಾರ್ತಿಯರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ ಎಂದರು.
PublicNext
03/12/2024 07:20 pm