ಕೊಡಗು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರ ಸರ್ವತೋಮುಖ ಅಭಿವೃದ್ಧಿಗೆ ಪರಿಣಾಮಕಾರಿಯಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಪಿ.ಪಿ.ಕವಿತಾ ತಿಳಿಸಿದ್ದಾರೆ.
ನಗರದ ತಮ್ಮ ಕಚೇರಿಯಲ್ಲಿ ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಹಾಗೂ ಮೀಸಲಾತಿ ಕಲ್ಪಿಸುವ ಸಂಬಂಧ ಗುರುವಾರ ನಡೆದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಅವರು ಮಾಹಿತಿ ನೀಡಿದರು.
ಕೊಡಗು ಜಿಲ್ಲೆಯಲ್ಲಿ ಅಲೆಮಾರಿ/ ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ಗೊಲ್ಲ, ಜೋಗಿ ಹಾಗೂ ಹಾವಾಡಿಗರ ಜಾತಿಗಳು ಪ್ರಮುಖವಾಗಿದ್ದು, ಈ ಸಮಾಜಗಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ನೀಡುವುದು. ಕಳೆದ ವರ್ಷ 30 ವಿದ್ಯಾರ್ಥಿಗಳಿಗೆ 2.13 ಲಕ್ಷ ರೂಪಾಯಿ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.
ಅರಿವು ಕಾರ್ಯಕ್ರಮದಡಿ 2021-22ನೇ ಸಾಲಿನಲ್ಲಿ ಮಡಿಕೇರಿ ತಾಲ್ಲೂಕಿನ ಅಯ್ಯಂಗೇರಿ ಗ್ರಾಮದಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಗಿದೆ. 2023-24ನೇ ಸಾಲಿಗೆ ಮನೆ ನಿರ್ಮಾಣಕ್ಕಾಗಿ 6 ಮನೆಗಳ ಅರ್ಜಿ ಆಯ್ಕೆ ಮಾಡಿ ಅನುಮೋದನೆಗೆ ಕಳುಹಿಸಲಾಗಿದೆ. ಹಾಗೆಯೇ ಮೂಲ ಸೌಲಭ್ಯಕ್ಕೆ ಒತ್ತು ನೀಡುವಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ, ಕುಡಿಯುವ ನೀರು ಟ್ಯಾಂಕ್ ನಿರ್ಮಿಸಲಾಗಿದೆ. 20 ಲಕ್ಷ ರೂಪಾಯಿ ಅನುದಾನದಲ್ಲಿ ಸಿಸಿ ರಸ್ತೆ ನಿರ್ಮಿಸಲು ಹಣ ಬಿಡುಗಡೆಯಾಗಿದೆ. ಸಂಪಾಜೆ ಬಳಿಯ ಕಲ್ಲಾಳ ಗ್ರಾಮದಲ್ಲಿ ಹಾಗೂ ಶನಿವಾರಸಂತೆಯ ತ್ಯಾಗರಾಜ ಕಾಲೋನಿಯ ಹಾವಾಡಿಗರ ಕಾಲೋನಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಕವಿತಾ ವಿವರಿಸಿದರು.
Kshetra Samachara
05/12/2024 07:35 pm