ತುಮಕೂರು : ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಲೆಮಾರಿ ಸಮುದಾಯಗಳಿಗೆ ಕುಡಿಯುವ ನೀರು, ವಿದ್ಯುತ್, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿAದು ನಡೆದ ಪ.ಜಾತಿ, ಪ.ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಲೆಮಾರಿ ಸಮುದಾಯಗಳ ಜಿಲ್ಲಾ ಮಟ್ಟದ ಕುಂದು ಕೊರತೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯ ಅನೇಕ ಅಲೆಮಾರಿ ಸಮುದಾಯದವರು ಆಧಾರ್ ಕಾರ್ಡ್, ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳಿಲ್ಲದೆ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಅಲೆಮಾರಿ ಸಮುದಾಯಗಳು ವಾಸಿಸುತ್ತಿರುವ ಗ್ರಾಮಗಳಿಗೆ ತೆರಳಿ ಜನರಲ್ಲಿ ಅರಿವು ಮೂಡಿಸಿ ಅಗತ್ಯ ದಾಖಲೆಗಳನ್ನು ಪಡೆಯುವಂತೆ ಮಾಡಬೇಕು ಎಂದು ಸೂಚಿಸಿದರು.
ಪ್ರತಿ ೩ ತಿಂಗಳಿಗೊಮ್ಮೆ ತಾಲ್ಲೂಕು ಮಟ್ಟದಲ್ಲಿ ಪ.ಜಾತಿ, ಪ.ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಲೆಮಾರಿ ಸಮುದಾಯಗಳ ಕುಂದು ಕೊರತೆ ಸಭೆ ನಡೆಸಬೇಕು ಎಂದು ಸೂಚನೆ ನೀಡಿದರು.
ಅಲೆಮಾರಿ ಸಮುದಾಯದವರಿಗೆ ವಿಶೇಷ ವಸತಿ ಯೋಜನೆಯಡಿ ನಿವೇಶನ ಸೌಲಭ್ಯಕ್ಕಾಗಿ ೩.೫೦ ಲಕ್ಷ ರೂ.ಗಳ ಸಹಾಯಧನ ನಿಗಧಿಪಡಿಸಲಾಗಿದ್ದರೂ ಸಹ ರಾಜೀವ್ ಗಾಂಧಿ ವಸತಿ ನಿಗಮವು ಕೇವಲ ೨ ಲಕ್ಷ ರೂ.ಗಳನ್ನು ನೀಡುತ್ತಿದ್ದು ಮನೆ ನಿರ್ಮಿಸಿಕೊಳ್ಳಲು ಹೆಚ್ಚಿನ ಅನುದಾನ ನೀಡಬೇಕು ಎಂದು ನಿರ್ದೇಶಿಸಿದರು.
ಜಿಲ್ಲೆಯಲ್ಲಿ ಅಲೆಮಾರಿ ಸಮುದಾಯಗಳಿಗೆ ನಿವೇಶನ ನೀಡಿರುವ ಪ್ರದೇಶಗಳಲ್ಲಿ ಕಲ್ಲು ಬಂಡೆಗಳಿದ್ದು, ಜನರು ವಾಸಿಸಲು ಯೋಗ್ಯವಾಗಿಲ್ಲ. ಉತ್ತಮ ನಿವೇಶನವನ್ನು ನೀಡಬೇಕು ಎಂದು ಸಮುದಾಯದ ಮುಖಂಡರು ಸಭೆಗೆ ಬೇಡಿಕೆಯಿಟ್ಟರು.
Kshetra Samachara
10/12/2024 06:14 pm